ಬೆಂಗಳೂರು,ಜ.31(ಕೆಎಂಶಿ)-ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಕೊನೆಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ನೂತನ ಶಾಸಕರಲ್ಲಿ 10 ಮಂದಿ ಸೇರಿದಂತೆ ಒಟ್ಟು 13 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅವಕಾಶ ನೀಡಿದ್ದು, ಅಂತು ಇನ್ನು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಯಾಗುವುದು ಬಹುತೇಕ ಖಚಿತವಾಗಿದೆ.
ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶುಕ್ರವಾರ ಮಧ್ಯಾಹ್ನ ಸಂಸತ್ ಭವನದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಜೊತೆ ಸುಮಾರು 25 ನಿಮಿಷ ಮಾತುಕತೆ ನಡೆಸಿ, ಸಂಪುಟ ವಿಸ್ತರಣೆಗೆ ಅನುಮತಿ ಪಡೆದಿದ್ದಾರೆ. 11 ಮಂದಿ ನೂತನ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಯಡಿಯೂರಪ್ಪ ಅವರ ಆಶಯವಾಗಿದ್ದರೂ, 10 ಮಂದಿ ಯನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮತಿ ದೊರೆತಿದೆ. ಶಾಸಕರಾದ ಡಾ.ಸುಧಾಕರ್, ರಮೇಶ್ ಜಾರಕಿ ಹೊಳಿ, ನಾರಾಯಣಗೌಡ,ಆನಂದ್ ಸಿಂಗ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಗೋಪಾಲಯ್ಯ, ಬಿ.ಸಿ.ಪಾಟೀಲ್, ಸೀಮಂತ ಪಾಟೀಲ್, ಶಿವರಾಂ ಹೆಬ್ಬಾರ್ ಸಂಪುಟ ಸೇರುವುದು ಬಹುತೇಕ ಖಚಿತವಾಗಿದ್ದು, ನೂತನ ಶಾಸಕರಲ್ಲಿ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ದೊರೆಯು ವುದು ಅನುಮಾನ. ಮೂಲ ಬಿಜೆಪಿ ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಹಾಲಪ್ಪ ಆಚಾರ್ ಮತ್ತು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ದುಡಿದ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಪೈಕಿ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ. ಶಾಸಕರಲ್ಲದೇ ಇರುವ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಿ, ಆರು ತಿಂಗಳೊಳಗಾಗಿ ವಿಧಾನ ಪರಿಷತ್‍ಗೆ ಆಯ್ಕೆ ಮಾಡಲು ಚಿಂತನೆ ನಡೆದಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಉಪ ಮುಖ್ಯಮಂತ್ರಿ ಸ್ಥಾನವನ್ನು ಹೆಚ್ಚುವರಿಯಾಗಿ ಸೃಷ್ಟಿಸದಿರಲು ತೀರ್ಮಾನಿಸಲಾಗಿದ್ದು, ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲು ಮತ್ತು ರಮೇಶ್ ಜಾರಕಿ ಹೊಳಿ ಅವರ ಆಸೆಗೆ ತಣ್ಣೀರೆರಚಿದಂತಾಗಿದೆ. ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನದಿಂದ ವಂಚಿತರಾಗುವ ಶಾಸಕರನ್ನು ಸಮಾಧಾನಪಡಿಸುವ ಹೊಣೆಗಾರಿಕೆಯನ್ನು ಯಡಿಯೂರಪ್ಪ ಅವರಿಗೆ ಪಕ್ಷದ ವರಿಷ್ಠರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಸಚಿವಾಕಾಂಕ್ಷಿಗಳ ಜೊತೆ ಮಾತುಕತೆ ನಡೆಸಿ, ಅವರನ್ನು ಸಮಾಧಾನಪಡಿಸಿ, ಸೋಮವಾರ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ಮಧ್ಯಾಹ್ನ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಇನ್ನು ಮೂರು ದಿನಗಳೊಳಗೆ ಸಂಪುಟ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದರು. ಎಲ್ಲವೂ ನಾವು ಅಂದುಕೊಂಡಂತೆ ಆಗಿದೆ. ವರಿಷ್ಠರು ಯಾವುದೇ ಪಟ್ಟಿಯನ್ನೂ ನೀಡಿಲ್ಲ. ನನ್ನ ಪಟ್ಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಸಂತೋಷದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದೇನೆ. ಅಲ್ಲಿ ಕೆಲವರ ಜೊತೆ ಸಮಾಲೋಚನೆ ನಡೆಸಿ, ಅವರನ್ನು ಸಮಾಧಾನಪಡಿಸಿ ಸಂಪುಟ ವಿಸ್ತರಣೆ ದಿನಾಂಕ ಹಾಗೂ ಪಟ್ಟಿ ಬಹಿರಂಗಪಡಿಸುವುದಾಗಿ ತಿಳಿಸಿದರು.
ಈಗಿರುವ ಮೂವರು ಉಪ ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಹೊಸದಾಗಿ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ಅವರ ಈ ಹೇಳಿಕೆಯಿಂದಾಗಿ ಲಕ್ಷ್ಮಣ ಸವದಿ ನಿರಾಳವಾಗಿರುವುದಲ್ಲದೇ, ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಅವರೇ ಅಭ್ಯರ್ಥಿ ಎಂದು ಹೇಳಬಹುದಾಗಿದೆ. ಸಂಪುಟ ಸೇರಬೇಕೆಂದು ತುದಿಗಾಲಲ್ಲಿ ನಿಂತಿರುವ ಆರ್.ಶಂಕರ್ ಇನ್ನೂ ಕೆಲ ತಿಂಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ರಾತ್ರಿ ಬೆಂಗಳೂರಿಗೆ ಹಿಂದಿರುಗಿದರು.