ಖರ್ಗೆ ಹೆಗಲಿಗೆ ಸಿಎಂ ಆಯ್ಕೆ
News

ಖರ್ಗೆ ಹೆಗಲಿಗೆ ಸಿಎಂ ಆಯ್ಕೆ

May 15, 2023

ಬೆಂಗಳೂರು, ಮೇ 14-ವಿಧಾನಸಭಾ ಚುನಾ ವಣೆಯಲ್ಲಿ 135 ಸ್ಥಾನಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಜಿದ್ದಾಜಿದ್ದಿ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ದಲಿತ ಸಿಎಂ ಕೂಗೂ ಕೂಡ ಕೇಳಿ ಬಂದಿದೆ.

ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದು ಮುಖ್ಯಮಂತ್ರಿ ಆಯ್ಕೆ ಜವಾ ಬ್ದಾರಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಮಾನಕ್ಕೆ ಬಿಡಲಾಗಿದೆ ಎಂದು ವಾಕ್ಯದ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಆಯ್ಕೆಗಾಗಿ ನೂತನ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಮಾಜಿ ಗೃಹ ಸಚಿವರೂ ಆದ ಮಹಾರಾಷ್ಟ್ರ ಮಾಜಿ ಸಿಎಂ ಸುಶೀಲ್‍ಕುಮಾರ್ ಶಿಂಧೆ ಹಾಗೂ ಪಕ್ಷದ ರಾಷ್ಟ್ರೀಯ ನಾಯಕ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಿಸಿದ್ದರು. ಈ ಮೂವರು ವೀಕ್ಷಕರು ಇಂದು ಸಂಜೆ ಬೆಂಗಳೂ ರಿನ ವಸಂತನಗರದಲ್ಲಿರುವ ಶಾಂಗ್ರೀಲಾ ಹೋಟೆಲ್‍ನಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖ ದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮುಖಂಡರಾದ ಬಿ.ಕೆ.ಹರಿಪ್ರಸಾದ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಸಲೀಂ ಅಹ ಮ್ಮದ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ ಮುಂತಾದವರು ವೇದಿಕೆಯಲ್ಲಿ ಇದ್ದರು.

ಸಭೆಯಲ್ಲಿ ಮೊದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಜನತೆಗೆ, ಎಐಸಿಸಿ ಅಧ್ಯಕ್ಷ ಖರ್ಗೆ, ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಪಕ್ಷದ ಕಾರ್ಯ ಕರ್ತರಿಗೆ ಧನ್ಯವಾದ ಅರ್ಪಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಚುನಾವಣೆಯನ್ನು ಯಾವ ರೀತಿ ಎಲ್ಲರೂ ಒಗ್ಗಟ್ಟಾಗಿ ನಡೆಸಿ ಯಶಸ್ವಿಯಾದೆವೋ ಅದೇ ರೀತಿ ಮುಖ್ಯಮಂತ್ರಿ ಆಯ್ಕೆಯೂ ಕೂಡ ಒಮ್ಮತದಿಂದಲೇ ಆಗಬೇಕು. ಆಡಳಿತ ಸುಸೂತ್ರವಾಗಿ ನಡೆಯಬೇಕು. ಮುಖ್ಯಮಂತ್ರಿಯಾಗಲು ಅರ್ಹತೆ ಇರುವವರು ಹಲವರಿದ್ದರೂ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್‍ಗೆ ಬಿಡೋಣ ಎಂದರು.

ಶಾಸಕರ ಅಭಿಪ್ರಾಯ ಸಂಗ್ರಹಿಸುವಂತೆ ಸಿದ್ದರಾಮಯ್ಯ ಹೇಳಿದರಾದರೂ, ಮಧ್ಯ ಪ್ರವೇಶಿಸಿದ ಡಿ.ಕೆ.ಶಿವಕುಮಾರ್, ಸಿಎಂ ಆಯ್ಕೆಯನ್ನು ಹೈಕಮಾಂಡ್‍ಗೇ ಬಿಡೊಣ ಎಂದು ಹೇಳಿದ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲಾಯಿತು. ಅದೇ ವೇಳೆ ಶಾಸಕರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ನೀಡುವಂತೆಯೂ ಅದನ್ನು ಒಗ್ಗೂಡಿಸಿ ವರದಿಯನ್ನು ಪಕ್ಷದ ಹೈಕಮಾಂಡ್‍ಗೆ ನೀಡಲಾಗುವುದೆಂದು ವೀಕ್ಷಕರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೆಲ ಶಾಸಕರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ತಿಳಿಸಿದರು.

Translate »