ಸಿಎಂ ಯಡಿಯೂರಪ್ಪರಿಂದ ಕೊಡಗಿನ ಪುನರ್‍ವಸತಿ, ಪರಿಹಾರ ಪ್ರಗತಿ ಪರಿಶೀಲನೆ
ಮೈಸೂರು

ಸಿಎಂ ಯಡಿಯೂರಪ್ಪರಿಂದ ಕೊಡಗಿನ ಪುನರ್‍ವಸತಿ, ಪರಿಹಾರ ಪ್ರಗತಿ ಪರಿಶೀಲನೆ

July 31, 2019

ಬೆಂಗಳೂರು, ಜು.30- ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ರಸ್ತೆ ಮತ್ತಿತರ ಮೂಲ ಸೌಕರ್ಯ ಪುನರ್ ನಿರ್ಮಾಣಕ್ಕೆ 535 ಕೋಟಿ ರೂ. ಅಗತ್ಯವಿದ್ದು, ಕೂಡಲೇ ಅದಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಪುನರ್ ವಸತಿ ಮತ್ತು ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದರು.

ಅತಿವೃಷ್ಟಿ, ಭೂಕುಸಿತದಿಂದ ರಸ್ತೆ, ಕಟ್ಟಡ ಸೇರಿದಂತೆ ಸುಮಾರು 1400 ಕೋಟಿ ರೂ. ಮೌಲ್ಯದ ಮೂಲಸೌಲಭ್ಯ ನಾಶವಾಗಿದೆ. ಕೇಂದ್ರ ಸರ್ಕಾರದಿಂದ ಈವರೆಗೆ 58 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ ವಿಶೇಷ ಅನುದಾನದಡಿ 85 ಕೋಟಿ ರೂ. ಬಿಡುಗಡೆಯಾಗಿದೆ. ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳು ನಗರ ಪ್ರದೇಶದಲ್ಲಿ ಚರಂಡಿ ಮತ್ತಿತರ ಶಾಶ್ವತ ದುರಸ್ತಿಗೆ ಸುಮಾರು 535 ಕೋಟಿ ರೂ. ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಗಳು ಮಾಹಿತಿ ನೀಡಿದರು. ಈ ಸೌಕರ್ಯಗಳ ಪುನರ್ ನಿರ್ಮಾಣಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಗಳು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಸಂಪೂರ್ಣ ವಾಗಿ ಮನೆ ಕಳೆದುಕೊಂಡಿರುವ 842 ಜನರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ,

ಕರ್ಣಂಗೇರಿ, ಮಾದಾ ಪುರದಲ್ಲಿ ಮನೆಗಳನ್ನು ನಿರ್ಮಿ ಸಲಾಗುತ್ತಿದೆ. ಇದಕ್ಕಾಗಿ 111 ಕೋಟಿ ರೂ., ಮೂಲ ಸೌಕರ್ಯಕ್ಕಾಗಿ 42.92 ಕೋಟಿ ರೂ. ಒದಗಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಮನೆಗಳು ಸಿದ್ಧವಾಗಲಿವೆ. ಇನ್ಫೋಸಿಸ್ ಪ್ರತಿಷ್ಠಾನದಿಂದ 200 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬು ಕುಮಾರ್ ಮಾಹಿತಿ ನೀಡಿದರು. ಸಂಪಾಜೆ ಗ್ರಾಮದಲ್ಲಿ ಸೇವಾ ಭಾರತಿ ಸಂಸ್ಥೆಯವರು 35 ಮನೆಗಳನ್ನು ನಿರ್ಮಿಸಲು ಮುಂದೆ ಬಂದಿದ್ದು, ಅನು ಮೋದನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಇದಲ್ಲದೆ ತಮ್ಮ ಜಮೀನಿನಲ್ಲಿಯೇ ಮನೆ ಕಟ್ಟಿಕೊಳ್ಳಲು ನೆರವು ನೀಡುವಂತೆ 83 ಮಂದಿ ಮನೆ ಕಳೆದುಕೊಂಡವರು ಅರ್ಜಿ ಸಲ್ಲಿಸಿದ್ದು, 54 ಜನರಿಗೆ ತಲಾ 9 ಲಕ್ಷ ರೂ. ಮಂಜೂ ರಾತಿ ನೀಡಲಾಗಿದೆ. ಉಳಿದ 29 ಮಂದಿಗೆ ನೆರವು ನೀಡಲು ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸುನೀಲ್ ಸುಬ್ರಮಣಿ, ಮುಖ್ಯಮಂತ್ರಿಗಳ ಸಲಹೆಗಾರರಾದ ಎಂ.ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

Translate »