ಬೆಂಗಳೂರು, ಅ.6(ಕೆಎಂಶಿ)- ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರದ ಮೇಲೆ ಒತ್ತಡ ತರಲು ಸಮುದಾಯದ ಜನಪ್ರತಿನಿಧಿಗಳು ಅ.11ರಂದು ನಗರದಲ್ಲಿ ಸಭೆ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು, ನಗರದ ಅರಮನೆ ಮೈದಾನದಲ್ಲಿ ನಡೆಯುವ ಈ ಸಭೆಯಲ್ಲಿ ನಮ್ಮ ಸಮುದಾಯದ ಸಂಸದರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ತಾಲೂಕು ಮತ್ತು ಇತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಮುದಾಯದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದಲೂ ನಮ್ಮ ಹೋರಾಟಕ್ಕೆ ಬೆಂಬಲವಿದೆ ಎಂದರು. ಕುರುಬ ಸಮುದಾಯ ಬುಡಕಟ್ಟು ಜನಾಂಗದಿಂದ ಗುರುತಿಸಿಕೊಂಡಿದೆ. ಬೀದರ್, ಕಲಬುರಗಿ, ಯಾದಗಿರಿ 3 ಜಿಲ್ಲೆಗಳಿಂದ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಪ್ರಸ್ತಾಪ ಕೇಂದ್ರಕ್ಕೆ ಹೋಗಿದೆ. ಕೊಡಗಿನ ಪ್ರಸ್ತಾಪ ವಾಪಸ್ ಬಂದಿದೆ. ಈ ಎರಡೂ ಪ್ರಸ್ತಾವನೆಗಳೊಂದಿಗೆ ಇಡೀ ಕರ್ನಾಟಕದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು ಕುರುಬ ಎಸ್ಟಿ ಹೋರಾಟ ಸಮಿತಿ ರಚನೆ ಮಾಡಲಾಗಿದೆ ಎಂದರು. ಎಸ್ಟಿ ಸಮುದಾಯದವರು ಶೇ.3ರಿಂದ 7ಕ್ಕೆ ಮೀಸಲಾತಿ ಬೇಡಿಕೆ ಇಟ್ಟಿದ್ದು, ಅದಕ್ಕೆ ನಮ್ಮ ಬೆಂಬಲವಿದೆ ಎಂದರು.