ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಎಲ್.ನಾಗೇಂದ್ರ
ಮೈಸೂರು

ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಎಲ್.ನಾಗೇಂದ್ರ

October 22, 2020

ಮೈಸೂರು, ಅ.21(ಎಸ್‍ಪಿಎನ್)- ನಗರದ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಶಾಸಕ ಎಲ್.ನಾಗೇಂದ್ರ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟ್ರಾಮಾಕೇರ್ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿದೆ. ಸಾರ್ವಜನಿಕ ಸೇವೆಗೆ ಬಳಸಿಕೊಳ್ಳಲು ಬೇಕಾದ ಅನುದಾನ, ಸಲಕರಣೆ, ಉಪಕರಣ, ಯಂತ್ರೋಪಕರಣದ ಪ್ರತಿಷ್ಠಾಪನೆಗಳನ್ನು ಖುದ್ದು ಪರಿಶೀಲಿ ಸಲು ಶಾಸಕರು ಭೇಟಿ ನೀಡಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆಸ್ಪತ್ರೆ ನಿರ್ಮಿಸಲು 33 ಕೋಟಿ ರೂ. ಅನುದಾನ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿತ್ತು. ಮತ್ತೆ ಈ ಆಸ್ಪತ್ರೆಯಲ್ಲಿ 40 ಹಾಸಿಗೆಗೆ 4 ಮಾಡ್ಯುಲರ್ ಓ.ಟಿ, ಆಕ್ಸಿಜನ್ ಜನರೇಷನ್ ಸಿಸ್ಟಂ, ಆಕ್ಸಿಜನ್ ಮ್ಯಾನುಫ್ಯಾಕ್ಚರಿಂಗ್ ಸಿಸ್ಟಂ ಅಳವಡಿಕೆಗೆ ಕೋರಿದ್ದ 4 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆಗೊಂಡಿದೆ ಎಂದರು.

ಈ ಅನುದಾನ ಬಳಕೆ ಮಾಡಿಕೊಂಡು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಈ ಆಸ್ಪತ್ರೆಯನ್ನು 250 ಹಾಸಿಗೆ ಸಾಮಥ್ರ್ಯಕ್ಕೆ ಅಣಿಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಏನಾದರೂ ಸಮಸ್ಯೆಗಳಿದ್ದಲ್ಲಿ ದಸರಾ ಕಳೆದ ನಂತರ ದಾಖಲಾತಿಗಳೊಂದಿಗೆ ಕಚೇರಿಗೆ ಆಗಮಿಸಿ ಚರ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಕೆ.ಆರ್.ಆಸ್ಪತ್ರೆಯ ಡೀನ್ ಡಾ. ನಂಜರಾಜ್, ವೈದ್ಯಕೀಯ ಅಧೀಕ್ಷಕರು, ಆರ್‍ಎಂಓ, ಆರೋಗ್ಯ ಇಲಾಖೆಯ ಇಂಜಿನಿಯರಿಂಗ್ ಘಟಕದ ಕಾರ್ಯಪಾಲಕ ಇಂಜಿನಿಯರ್ ಶ್ರೀನಾಥ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್, ಜಗದೀಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಿದ್ದೇಗೌಡ, ಸಹಾಯಕ ಇಂಜಿನಿಯರ್ ನಾಗರಾಜ್ ಮುಂತಾದವರಿದ್ದರು.

 

Translate »