ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ
News

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ

January 24, 2022

ನವದೆಹಲಿ, ಜ.23- ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92 ವರ್ಷ) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಲತಾ ಮಂಗೇಶ್ಕರ್ ಅವರ ಆರೋಗ್ಯ ಕುರಿತಾದ ವದಂತಿಗಳಿಗೆ ಕಿವಿಗೊಡದಂತೆ ಅವರ ವಕ್ತಾರರು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಆರೋಗ್ಯ ಕುರಿತು ಗಾಳಿ ಸುದ್ದಿಗಳು ಹರಡಿದ್ದವು. ಈ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ವಕ್ತಾರರು ಮನವಿ ಮಾಡಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕೂಡ ಟ್ವೀಟ್ ಮಾಡಿದ್ದು, ಲತಾ ಅವರ ಆರೋಗ್ಯ ಸ್ಥಿರವಾಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರ ಕುಟುಂಬಸ್ಥರು ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಎರಡು ವಾರಗಳ ಹಿಂದೆ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್-19 ದೃಢ ಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೊರೊನಾ ವೈರಸ್ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದು. ಮುನ್ನೆಚ್ಚರಿಕೆಯ ಕಾರಣಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ವೈದ್ಯರು ಅವರನ್ನು ನೋಡಲು ಯಾರಿಗೂ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Translate »