ಕೊಡಗಿನಲ್ಲಿ ಮಳೆ ಕಡಿಮೆಯಾಗಲು ಪ್ರಾರ್ಥಿಸೋಣ: ಶಾಸಕ ಕೆ.ಜಿ.ಬೋಪಯ್ಯ
ಕೊಡಗು

ಕೊಡಗಿನಲ್ಲಿ ಮಳೆ ಕಡಿಮೆಯಾಗಲು ಪ್ರಾರ್ಥಿಸೋಣ: ಶಾಸಕ ಕೆ.ಜಿ.ಬೋಪಯ್ಯ

August 12, 2018

ಮಡಿಕೇರಿ:  ಜಿಲ್ಲೆಯಲ್ಲಿ ಯಾರೂ ನಿರೀಕ್ಷೆ ಮಾಡದಷ್ಟು ಮಳೆ ಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಜನರು ಕಷ್ಟ ನಷ್ಟಕ್ಕೆ ಸಿಲುಕಿದ್ದು, ಮಳೆ ಕಡಿಮೆಯಾಗಲು ಎಲ್ಲರೂ ಪ್ರಾರ್ಥಿಸೋಣ ಎಂದು ಬೋಪಯ್ಯ ಕರೆ ನೀಡಿದರು.

ಕೊಡಗು ಜಿಲ್ಲಾ ಯುವ ಒಕ್ಕೂಟ, ಹಾಗೂ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕಗ್ಗೋಡ್ಲು ಗ್ರಾಮದ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆದ 27ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡೋತ್ಸವವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿ, ಮಾತನಾಡಿದರು. ಕೊಡಗಿ ನಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಆರಂಭಿಸಿದ ನಂತರ ಇತರ ಭಾಗಗಳಲ್ಲೂ ಪ್ರೇರಣೆಯಾಗಿ ಕೆಸರು ಗದ್ದೆ ಕ್ರೀಡಾಕೂಟ ಗಳು ನಡೆಯುತ್ತಿರುವುದನ್ನು ಕಾಣಬಹು ದಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಜಿಲ್ಲೆಯಲ್ಲಿ ಭತ್ತದ ಗದ್ದೆಗಳು ಕ್ಷೀಣಿಸುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಭತ್ತದ ಗದ್ದೆಗಳು ಹೆಚ್ಚಾ ದಷ್ಟು ಅಂತರ್ಜಲದ ಮಟ್ಟ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದರು.

ತಾಲೂಕು ಪಂಚಾಯಿತಿ ಸದಸ್ಯೆ ಕುಮುದ ರಶ್ಮಿ ಮಾತನಾಡಿ, ಕೆಸರು ಗದ್ದೆ ಕ್ರೀಡಾಕುಟದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿನ ದೃಢತೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಹಾಕತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದ ರಾಮಕೃಷ್ಣ, ಯೂತ್ ಹಾಸ್ಟೆಲ್ ಮೇಲ್ವಿಚಾರಕ ರಾಜಶೇಖರ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಡಿ. ಹರೀಶ್, ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಸುಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಾಲಿ ಬಾಲ್, ಥ್ರೋಬಾಲ್, ಹಗ್ಗ ಜಗ್ಗಾಟ, ನಾಟಿ ಓಟ, ಹೀಗೆ ವಿವಿಧ ಸ್ಪರ್ಧೆಗಳು ನಡೆದವು. ಎಡೆಬಿಡದೆ ಸುರಿಯುತ್ತಿದ್ದ ಮಳೆ, ಚಳಿಯನ್ನು ಲೆಕ್ಕಿಸದೆ ಕೆಸರಿನಲ್ಲಿ ಮಿಂದೆದ್ದ ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿ ಮೆರೆದರು.
ಸಂಜೆ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡೆ ಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಗಣ್ಯರು ಬಹುಮಾನ ವಿತರಿಸಿದರು.

Translate »