ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ಜೆಡಿಎಸ್ ಬಲ ಪ್ರದರ್ಶನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿಯಲಿದ್ದಾರೆ.
ಇದುವರೆಗೂ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಮಾತ್ರ ಹೊಸದಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿತ್ತು. ಆದರೆ ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಚುನಾವಣಾ ಕಣಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ನಿಖಿಲ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಸ್ಥಳೀಯ ಕಾರ್ಯಕರ್ತರು ಮತ್ತು ಮುಖಂಡರ ಒತ್ತಡವಿದೆ. ನಿಖಿಲ್ ಈಗಾಗಲೇ ಸಿನೆಮಾ ಜೊತೆಗೆ ಪಕ್ಷ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ನಿಖಿಲ್ ಅವರಿಗೆ ರಾಜ್ಯ ರಾಜಕೀಯಕ್ಕಿಂತ ರಾಷ್ಟ್ರ ರಾಜಕಾರಣದ ಮೇಲೆ ಆಸಕ್ತಿ ಇದೆ. ವರಿಷ್ಠರು ತೀರ್ಮಾನ ಕೈಗೊಂಡರೆ ಮಂಡ್ಯದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದರು. ಈ ಮಧ್ಯೆ ದೇವೇಗೌಡರು ತಾವು ಪ್ರತಿನಿಧಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಆಸಕ್ತಿ ಹೊಂದಿದ್ದಾರೆ. ಕಾಂಗ್ರೆಸ್ ಮೈತ್ರಿಯೊಂದಿಗೆ ಕಣಕ್ಕಿಳಿದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಸುಲಭ ಜಯ ಗಳಿಸುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಪ್ರಸ್ತುತ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಬಿಜೆಪಿ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಕ್ಷೇತ್ರದಲ್ಲಿ ಸಮಬಲ ಹೊಂದಿವೆ.
ಲೋಕಸಭಾ ಚುನಾವಣೆಯಲ್ಲಿ 12 ಸ್ಥಾನಗಳನ್ನು ತಮಗೆ ಬಿಟ್ಟುಕೊಡುವಂತೆ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಕಾಂಗ್ರೆಸ್ ಮೇಲೆ ಒತ್ತಡ ಹೇರುತ್ತಿದ್ದರೂ, ಕನಿಷ್ಠ 9ರಿಂದ 10 ಸ್ಥಾನಗಳಿಗೆ ಒಪ್ಪುವ ಸಾಧ್ಯತೆ ಇದೆ. ಹಾಸನ, ಮಂಡ್ಯ, ಮೈಸೂರು, ವಿಜಯಪುರ, ಬೀದರ್, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ದೇವೇಗೌಡರು ಪೂರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣಾ ಮೈತ್ರಿ ಆದರೆ ಒಳ್ಳೆಯದು ಇಲ್ಲದಿದ್ದರೆ ಕಾಂಗ್ರೆಸ್‍ನೊಂದಿಗೆ ಪರಸ್ಪರ ತಿಳುವಳಿಕೆ ಆಧಾರದ ಮೇಲೆ ಈ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ. ವೈಯಕ್ತಿಕ ವರ್ಚಸ್ಸು ಮತ್ತು ಪಕ್ಷದ ಬಲ ಒಗ್ಗೂಡಿಸಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ತಮ್ಮ ಕುಟುಂಬದ ಮೂವರನ್ನು ಕಣಕ್ಕಿಳಿಸುವುದಲ್ಲದೆ, ಉಳಿದ ಕ್ಷೇತ್ರಗಳಲ್ಲಿ ಸ್ಫರ್ಧೆಗೆ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಟ್ಟುಕೊಂಡಿದ್ದಾರೆ.