ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ
ಮೈಸೂರು

ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ

February 17, 2019

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ಮೂರನೇ ವಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಹಿನ್ನೆಲೆಯಲ್ಲಿ ಇದೇ 20ರೊಳಗೆ ರಾಜಕೀಯ ನಿರ್ಧಾರ ಹಾಗೂ ಅಧಿಕಾರಿಗಳ ವರ್ಗಾವರ್ಗಿ ಕಾರ್ಯ ಪೂರ್ಣಗೊಳ್ಳಲಿದೆ.

ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಲೋಕ ಸಭಾ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ ಮಾಹಿತಿ ನೀಡಿರುವುದಲ್ಲದೆ, ಆಯೋಗದ ಮಾರ್ಗಸೂಚಿ ಅನುಸಾರ 20ರೊಳಗೆ ವರ್ಗಾವಣೆ ಮುಗಿಸಿ, 25ಕ್ಕೆ ಪೂರ್ಣ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯ ಕಾರ್ಯದರ್ಶಿಯವರು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಲ್ಲದೆ, ಆಯೋಗದ ಸೂಚನೆಯಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರಿದ್ದಾರೆ. ಅಷ್ಟೇ ಅಲ್ಲ ಸ್ವತಃ ಮುಖ್ಯ ಮಂತ್ರಿಯವರೇ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಚುನಾವಣಾ ಪ್ರಕ್ರಿಯೆ ಪ್ರಾರಂಭಗೊಳ್ಳುವುದಕ್ಕೂ ಮುನ್ನವೇ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ ಇನ್ನಿತರ ಪರೀಕ್ಷಾ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಮುಖ್ಯ ಮಂತ್ರಿಯ ವರು ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ. ಏಪ್ರಿಲ್ ಮಾಹೆಯಲ್ಲಿ ಚುನಾವಣೆ ಎದುರಾಗ ಬಹುದು. ಇಂತಹ ಸಂದರ್ಭದಲ್ಲಿ ನಾವು ಕಂದಾಯ, ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಶಿಕ್ಷಕ ವೃಂದ ಇದರಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಅಲ್ಲದೆ ಆಯೋಗದ ಸುಪರ್ದಿಗೆ ಶಾಲಾ ಕಾಲೇಜು ಗಳನ್ನು ಬಿಟ್ಟು ಕೊಡಬೇಕಾಗ ಬಹುದು. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಗಿಸಿ, ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಸೋರಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ಕಟ್ಟಾದೇಶ ಮಾಡಿದ್ದಾರೆ.

ಮಾ.3ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಎನ್‍ಡಿಎ ಮೈತ್ರಿ ಕೂಟದ ಬೃಹತ್ ರ್ಯಾಲಿ ನಡೆಯಲಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮೊದಲ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದರ ಅರ್ಥ ಏಪ್ರಿಲ್ ಎರಡನೇ ವಾರದಿಂದಲೇ ರಾಷ್ಟ್ರದ ಎಲ್ಲ ಲೋಕಸಭೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಾರ್ಯದರ್ಶಿ ನರೇಂದ್ರ .ಎನ್ ಬುಟಲಿಯಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್‍ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಇತಿಮಿತಿಯಲ್ಲೇ ತನ್ನ ಅನುಕೂಲಕ್ಕೆ ತಕ್ಕಂತೆ ವರ್ಗಾವಣೆ ಕಾರ್ಯ ಪೂರ್ಣಗೊಳಿಸಲಿದೆ.

Translate »