ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ: ಜೆಡಿಎಸ್‍ನ ಶಿವರಾಮೇಗೌಡ, ಬಿಜೆಪಿಯ ಡಾ.ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ
ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ: ಜೆಡಿಎಸ್‍ನ ಶಿವರಾಮೇಗೌಡ, ಬಿಜೆಪಿಯ ಡಾ.ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

October 16, 2018

ಮಂಡ್ಯ:ಮಂಡ್ಯ ಲೋಕ ಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಒಟ್ಟು 6 ನಾಮಪತ್ರ ಸಲ್ಲಿಕೆಯಾದವು.
ಸ್ಥಳೀಯ ಹಲವು ನಾಯಕರ ಅಸಮಾಧಾನದ ನಡುವೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ನಾಮಪತ್ರ ಸಲ್ಲಿಸಿದರು.

ಎಲ್.ಆರ್.ಶಿವರಾಮೇಗೌಡ ನಾಮಪತ್ರ ಸಲ್ಲಿಕೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ, ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ಶಾಸಕರು ಹಾಜರಿದ್ದರು. ಆದರೆ ಕಾಂಗ್ರೆಸ್ ಪರ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಹೊರತು ಪಡಿಸಿದರೆ ಸ್ಥಳೀಯ ಕಾಂಗ್ರೆಸ್ ನಾಯಕರು ಸೇರಿದಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯಾವೊಬ್ಬ ಕಾಂಗ್ರೆಸ್ ಮುಖಂಡರೂ ಹಾಜರಿರಲಿಲ್ಲ.

ರಾರಾಜಿಸಿದ ದೋಸ್ತಿ ಬಾವುಟಗಳು: ಸಮ್ಮಿಶ್ರ್ರ ಸರ್ಕಾರದ ಮೈತ್ರಿಕೂಟದ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಬಾವುಟಗಳು ಒಟ್ಟಿಗೆ ಹಾರಾಡುತ್ತಿದ್ದುದು ವಿಶೇಷವಾಗಿತ್ತು. ಅಲ್ಲಲ್ಲಿ ಎಲ್.ಆರ್.ಶಿವರಾಮೇಗೌಡ, ಕುಮಾರಣ್ಣ ಪರ ಘೋಷಣೆ ಕೇಳಿ ಬಂದವು.

ಡಾ.ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ: ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಬೆರಳೆಣಿಕೆ ಕಾರ್ಯಕರ್ತರ ನಡುವೆ
ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಯಾವುದೇ ಮೆರವಣಿಗೆ, ಬಾವುಟ ಪ್ರದರ್ಶನ, ಜಯ ಘೋಷವಿರಲಿಲ್ಲ. ಡಾ.ಸಿದ್ದರಾಮಯ್ಯ ಅವರ ಆಯ್ಕೆಗೆ ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಅಸಮಾಧಾನವಿದ್ದು, ನಾಮಪತ್ರ ಸಲ್ಲಿಕೆ ವೇಳೆಯೂ ಇದು ಬಹಿರಂಗಗೊಂಡಿತು. ಡಾ.ಸಿದ್ದರಾಮಯ್ಯ ಅವರ ನಾಮಪತ್ರ ಸಲ್ಲಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನಾಗಣ್ಣಗೌಡ, ಮುಖಂಡರಾದ ಕೆ.ಎಸ್.ನಂಜುಂಡೇಗೌಡ, ಹೆಚ್.ಪಿ.ಮಹೇಶ್ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಡಾ.ಸಿದ್ದರಾಮಯ್ಯ ಅವರು ಕಾವೇರಿ ವನದಲ್ಲಿನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಜಗಜೀವನ್‍ರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

6 ನಾಮಪತ್ರ ಸಲ್ಲಿಕೆ: ಎಲ್.ಆರ್. ಶಿವರಾಮೇಗೌಡ ಎರಡು ಬಾರಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ ಅದೃಷ್ಟ ಸಂಖ್ಯೆ ಆಧರಿಸಿ ನಾಲ್ಕು ನಾಮಪತ್ರ ಸಲ್ಲಿಸಿರಬಹುದು ಎಂದು ಮಂಡ್ಯದಲ್ಲಿ ಚರ್ಚೆಯಾಗುತ್ತಿದೆ. ಶಿವರಾಮೇಗೌಡ ಅವರು ನಾಲ್ಕು ನಾಮಪತ್ರ ಸಲ್ಲಿಸಿರುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಒಟ್ಟು 6 ನಾಮಪತ್ರ ಸಲ್ಲಿಕೆಯಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ನವೀನ್ ಕುಮಾರ್ 1 ನಾಮಪತ್ರ ಸಲ್ಲಿಸಿದರು.

ಕಾಲಭೈರವನ ದರ್ಶನ: ಎಲ್.ಆರ್.ಶಿವರಾಮೇಗೌಡರು ನಾಮಪತ್ರ ಸಲ್ಲಿಕೆಗೂ ಮುನ್ನ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿಯಲ್ಲಿರುವ ಶ್ರೀಕಾಲಭೈರವೇಶ್ವರಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ಮುಂದೆ ಬಿ-ಫಾರಂ ಇಟ್ಟು ಪೂಜೆ ಸಲ್ಲಿಸಿದರು. ನಂತರ ಡಾ.ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಂಡ್ಯ ಡಿಸಿ ಕಚೇರಿಗೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದರು.

Translate »