ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಉಪ ಚುನಾವಣೆ
ಮೈಸೂರು

ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಉಪ ಚುನಾವಣೆ

October 7, 2018

ಬೆಂಗಳೂರು: ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಗಳು, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಲಿಗೆ ನವೆಂಬರ್ 3ರಂದು ಉಪ ಚುನಾವಣೆ ಘೋಷಣೆಯಾಗಿದೆ.

ಐದು ತಿಂಗಳ ಅವಧಿಗೆ ಮೂರು ಲೋಕಸಭಾ ಕ್ಷೇತ್ರಗಳ ಜನಪ್ರತಿನಿಧಿಗಳ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಅವಕಾಶ ಮಾಡಿದ್ದರೆ, ಉಳಿದ ಎರಡು ವಿಧಾನಸಭಾ ಕ್ಷೇತ್ರಗಳ ಕಾಲಾವಧಿ 4 ವರ್ಷ 8 ತಿಂಗಳದ್ದಾಗಿರುತ್ತದೆ. ದೆಹಲಿಯಲ್ಲಿಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಇತರ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದಲ್ಲಿ ತೆರವಾಗಿದ್ದ ಕ್ಷೇತ್ರಗಳಿಗೂ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಚುನಾ ವಣಾ ಅಧಿಸೂಚನೆ ಅಕ್ಟೋಬರ್ 9 ರಂದು ಹೊರಡಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿ ಅಕ್ಟೋಬರ್ 16 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿ ರುತ್ತದೆ.

ನಾಮಪತ್ರ ಪರಿಶೀಲನೆ ಅಕ್ಟೋಬರ್ 17ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂದೆ ಪಡೆಯಲು ಅಕ್ಟೋಬರ್ 20 ಕಡೇ ದಿನವಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 6ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ನಡೆಯಲಿರುವ ಕ್ಷೇತ್ರಗಳ ಜಿಲ್ಲೆಗಳಲ್ಲಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗಿದೆ. ಇದರಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆಗಳು ಹೆಚ್ಚಿವೆ.

ಸಿ.ಎಸ್.ಪುಟ್ಟರಾಜು(ಮಂಡ್ಯ), ಬಿ.ಎಸ್.ಯಡಿ ಯೂರಪ್ಪ(ಶಿವಮೊಗ್ಗ), ಶ್ರೀರಾಮುಲು(ಬಳ್ಳಾರಿ) ರಾಜ್ಯ ವಿಧಾನಸಭೆಗೆ ಆಯ್ಕೆಗೊಂಡಿದ್ದರಿಂದ ತಮ್ಮ ಲೋಕಸಭಾ ಕ್ಷೇತ್ರಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆ ವಿಜೇತರಾಗಿದ್ದರು. ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು, ರಾಮನಗರ ತೆರವುಗೊಳಿಸಿದ್ದರಿಂದ ಉಪಚುನಾವಣೆ ಎದುರಾಗಿದೆ.

ಜಮಖಂಡಿ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸಿದ್ದುನ್ಯಾಮಗೌಡ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಆಡಳಿತ ಮೈತ್ರಿ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಉಪಚುನಾವಣೆಯಲ್ಲಿ ಹೊಂದಾಣಿಕೆಯೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿವೆ.

Translate »