ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ
ಮಂಡ್ಯ

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ

October 10, 2018

ಮಂಡ್ಯ: ಜಿಲ್ಲೆಯ ಜೀವ ನಾಡಿ ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯಕಾರಿ ಯಾಗಿದ್ದ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಡಿಸಿ ಎನ್. ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣ ರಾಜಸಾಗರ ಜಲಾಶಯದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಮಂಗಳವಾರ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸುವಂತೆ ಪ್ರಕೃತಿ ವಿಕೋಪ ಕೇಂದ್ರ ನೀಡಿರುವ ವರದಿಯನ್ನು ಆಧರಿಸಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳ ಲಾಗಿದೆ ಎಂದರು.

ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಬಾರಿ ಸ್ಫೋಟಗಳನ್ನು ಬಳಸಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವರದಿಗಳಿವೆ. ಈ ಭಾಗದಲ್ಲಿ ಸೆಕ್ಷನ್ 144 ಜಾರಿ ಯಲ್ಲಿದ್ದರೂ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತಂತೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ವರದಿ ನೀಡಬೇಕು ಎಂದು ತಿಳಿಸಿದರು.

ನೀರಾವರಿ ಇಲಾಖೆಯೊಂದಿಗೆ ಸಂಪರ್ಕ ಇಟ್ಟುಕೊಂಡು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಗಬಹುದಾದ ತೊಂದರೆ ಕುರಿತಂತೆ ಸಮಗ್ರ ಅಧ್ಯಯನ ವರದಿಯನ್ನು ಸಂಬಂಧಪಟ್ಟ ಅಧಿಕಾರಿ ಗಳು ನೀಡಬೇಕು. ಸಾರ್ವಜನಿಕರು ಗಣಿಗಾರಿಕೆ ನಿಷೇಧ ಕುರಿತಂತೆ ನೀಡುವ ಯಾವುದೇ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಲು 3 ತಂಡಗಳನ್ನು ರಚಿಸಲಾಗಿದೆ ಎಂದರು.  ಕೃಷ್ಣರಾಜಸಾಗರ ವ್ಯಾಪ್ತಿಯ ಹಿನ್ನೀರಿನ ಭಾಗ ದಲ್ಲಿ ಕೆ.ಆರ್.ನಗರ ತಾಲೂಕಿಗೆ ಹೊಂದಿಕೊಂಡಂತೆ ಕೆಲವು ಗ್ರಾಮಗಳಲ್ಲಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿಗಳಿವೆ. ಈ ಕುರಿತಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಗಣಿಗಾರಿಕೆ ನಿಷೇಧಿಸುವಂತೆ ಮನವಿ ಮಾಡ ಲಾಗುವುದು ಎಂದ ಜಿಲ್ಲಾಧಿಕಾರಿಯವರು, ಕೃಷ್ಣರಾಜ ಸಾಗರ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸುವ ಬಗ್ಗೆ ರೈತರು, ಜನಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ಮಾಧ್ಯಮಗಳ ಮೂಲಕ ಹೇಳಿರುವುದು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್, ಗಣಿ ಭೂ ವಿಜ್ಞಾನ ಅಧಿಕಾರಿ ನಾಗಭೂಷಣ್, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Translate »