ಹಾಸನ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಹಳ್ಳಿ ಹಳ್ಳಿಗಳಲ್ಲಿ ಗೂಡಂಗಡಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಅದನ್ನು ಸಂಪೂರ್ಣ ವಾಗಿ ಮಟ್ಟ ಹಾಕುವಂತೆ ಅಬಕಾರಿ ಇಲಾಖೆ ಜಿಲ್ಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಒಂದು ವೇಳೆ ಅದು ನಿಯಂತ್ರಣಕ್ಕೆ ಬರದಿದ್ದರೆ ರಾಜ್ಯ ಅಬಕಾರಿ ಆಯುಕ್ತರಿಗೆ ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಸೂಚಿಸಲಾಗುವುದು ಎಂದರು.
ಯಾವುದಾದರು ಪರವಾನಗಿ ಪಡೆದು ಮದ್ಯ ಮಾರಾಟ ಗಾರರು ಗ್ರಾಮೀಣ ಪ್ರದೇಶಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಪರವಾನಗಿಯನ್ನು ರದ್ದು ಪಡಿಸಲಾಗುವುದು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಲೋಕಸಭಾ ಸದಸ್ಯರು ಹಾಗೂ ವಿಧಾನಸಭಾ ಸದಸ್ಯರ ಅನುದಾನದ ಕಾಮಗಾರಿಗಳಿಗೆ ಜ.30ರೊಳಗೆ ಕ್ರಿಯಾ ಯೋಜನೆಗಳಿಗೆ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ಎಲ್ಲಾ ಇಲಾಖಾ ಅಧಿಕಾರಿಗಳು ತಮಗೆ ನಿಗದಿ ಪಡಿಸಿರುವ ಅನುದಾನ ವ್ಯರ್ಥವಾಗದಂತೆ ಸದ್ಬಳಕೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ರೇವಣ್ಣ ಹೇಳಿದರು.
ಜ.16ರಂದು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಸಚಿವ ರೇವಣ್ಣ ಅವರು ತಿಳಿಸಿದರು.