ಶಾಸಕ ಶರತ್ ಬಚ್ಚೇಗೌಡ ದಂಪತಿಗೂ ಕೊರೊನಾ
ಮೈಸೂರು

ಶಾಸಕ ಶರತ್ ಬಚ್ಚೇಗೌಡ ದಂಪತಿಗೂ ಕೊರೊನಾ

July 9, 2020

ಬೆಂಗಳೂರು, ಜು.8- ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಶಾಸಕರಿಗೆ ಮೊನ್ನೆ (ಸೋಮವಾರ) ಮೈಕೈ ನೋವು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಬುಧವಾರ ಬಂದ ವರದಿಯಲ್ಲಿ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸ್ವತಃ ಶರತ್ ಬಚ್ಚೇಗೌಡರೇ ಮಾಹಿತಿ ಹಂಚಿಕೊಂಡಿದ್ದಾರೆ. ಜುಲೈ 6ರಂದು ನನಗೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದೆ. ಹಾಗಾಗಿ ಕೋವಿಡ್ ಪರೀಕ್ಷೆಗೆ ನಾನು ಮತ್ತು ನನ್ನ ಪತ್ನಿ ಒಳಗಾಗಿದ್ದೆವು. ಬುಧವಾರ ಸಂಜೆ ಇಬ್ಬರಿಗೂ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆ ಪಡೆದು ಅಗತ್ಯ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದೇವೆ. ಮನೆಯಲ್ಲೇ ಕ್ವಾರಂಟೈನ್‍ಗೆ ಒಳಪಟ್ಟಿದ್ದೀವಿ ಎಂದು ಶರತ್ ಬಚ್ಚೇಗೌಡ ಹೇಳಿದ್ದಾರೆ. ರೋಗ ನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ ಎಂದು ಶಾಸಕರು ಕೋರಿದ್ದಾರೆ.

Translate »