ಮೈಸೂರು, ಆ. 18(ಆರ್‍ಕೆ)- ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ.
ಸೋಮವಾರ ರಿಷ್ಯಂತ್ ಅವರನ್ನು ರ್ಯಾಪಿಡ್ ಆ್ಯಂಟಿಜೆನ್ ಕಿಟ್‍ನಲ್ಲಿ ಪರೀಕ್ಷಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಯಲ್ಲಿ ಅವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಎಸ್ಪಿ ಅವರ ಕಚೇರಿ, ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಅವರ ಸಂಪರ್ಕಿತರೆಲ್ಲರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಕಚೇರಿ ಮೂಲಗಳು ತಿಳಿಸಿವೆ.
ಸರ್ಕಲ್ ಇನ್ಸ್‍ಪೆಕ್ಟರ್ ಕಚೇರಿ ಸೀಲ್‍ಡೌನ್: ಮೂವರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಜರ್‍ಬಾದ್‍ನಲ್ಲಿರುವ ಮೈಸೂರು ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಸರ್ಕಲ್ ಇನ್ಸ್‍ಪೆಕ್ಟರ್ ಸೇರಿದಂತೆ ಕಚೇರಿಯ ಎಲ್ಲಾ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಲಾಗಿದೆ.