ಸಿಎಂಗೆ ಕರೆ ಮಾಡಿ, ಕೊಡಗಿನ ಮಾಹಿತಿ ಪಡೆದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ಕೊಡಗು

ಸಿಎಂಗೆ ಕರೆ ಮಾಡಿ, ಕೊಡಗಿನ ಮಾಹಿತಿ ಪಡೆದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

August 20, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕರೆ ಮಾಡಿ, ಭಾರಿ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕದ ಕೊಡಗು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ. `ಪ್ರವಾಹ ಪರಿ ಸ್ಥಿತಿ ಕುರಿತು ಕರ್ನಾಟಕ ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಜನರನ್ನು ರಕ್ಷಣೆ ಮಾಡುವುದು ಮತ್ತು ಪರಿಹಾರ ಕಾರ್ಯಗಳಲ್ಲಿ ಸಾಧ್ಯವಾದಷ್ಟು ನೆರವನ್ನು ನಾವು ನೀಡುತ್ತೇವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇಂದು ಮಡಿಕೇರಿಯಲ್ಲಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಪ್ರಧಾನಿ ಮೋದಿ ಕರೆ ಮಾಡಿದ್ದು,ಮಧ್ಯದಲ್ಲೇ ಎದ್ದು ಹೋದ ಸಿಎಂ, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಸೇನಾ ಸಿಬ್ಬಂದಿ, ಎನ್‍ಡಿಆರ್‍ಎಫ್ ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಇದುವರೆಗೆ 3500ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಸೇನಾಪಡೆ ಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು ಈವರೆಗೆ 3500ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿಯವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.

Translate »