ಮೈಸೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಯಕ ಸಮು ದಾಯ ಹಿರಿಯ ಮುಖಂಡರಾದ ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿರುವ ಅಪೆಕ್ಸ್ ಬ್ಯಾಂಕ್ ಸೂಪರ್ ಸೀಡ್ ಮಾಡಿ ಸೇಡು ತೀರಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಮೈಸೂರು ನಾಯಕ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದ ನಾಯಕ ಸಮುದಾಯ ಸದಸ್ಯರು, ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಎದುರಾಳಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಯಾವುದೇ ಹಗರಣ ನಡೆಯದೆ ಇದ್ದರೂ ಸಹಕಾರ ಇಲಾಖೆ ಮೂಲಕ ಅಪೆಕ್ಸ್ ಬ್ಯಾಂಕ್‍ನ್ನು ಸೂಪರ್ ಸೀಡ್ ಮಾಡಲು ಮುಂದಾಗಿ, ಬ್ಯಾಂಕ್ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಅಪೆಕ್ಸ್ ಬ್ಯಾಂಕ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಕೆ.ಎನ್.ರಾಜಣ್ಣ ಅವರ ವಿರುದ್ಧ ಕ್ರಮ ಕೈಗೊಂಡರೆ ನಾಯಕ ಸಮುದಾಯ ಸಿಡಿದೇಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಪಡುವಾರಹಳ್ಳಿ ಎಂ.ರಾಮಕೃಷ್ಣ, ದ್ಯಾವಪ್ಪ ನಾಯಕ, ಪ್ರಭಾಕರ್, ರಾಜು ಹುಣಸೂರು ಇನ್ನಿತರರು ಪಾಲ್ಗೊಂಡಿದ್ದರು.