ರಾಷ್ಟ್ರಪತಿ ಚುನಾವಣೆ ಬೆಂಗಳೂರಿಗೆ ಆಗಮಿಸಿದ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು
News

ರಾಷ್ಟ್ರಪತಿ ಚುನಾವಣೆ ಬೆಂಗಳೂರಿಗೆ ಆಗಮಿಸಿದ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

July 11, 2022

ಬೆಂಗಳೂರು, ಜು.10- ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಭಾನು ವಾರ ಬೆಂಗಳೂರಿಗೆ ಆಗಮಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮತ್ತು ನಗರಾ ಭಿವೃದ್ಧಿ ಸಚಿವ ಬಸವರಾಜ್ ಭೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ರಾಷ್ಟ್ರಪತಿ ಹುದ್ದೆಗೆ ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ತಮ್ಮನ್ನು ಬೆಂಬಲಿಸುವಂತೆ ಕೋರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

ಸುಮಲತಾ ಬೆಂಬಲ: ದೌಪದಿ ಮುರ್ಮು ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲವನ್ನು ಸೂಚಿದ್ದಾರೆ. ಸಂಸದೆ ಸುಮಲತಾ ಅವರು ಬಿಜೆಪಿ ಸಭೆ ನಡೆಯುತ್ತಿದ್ದ ಹೋಟೆಲ್‍ಗೆ ಆಗಮಿಸಿ, ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಎನ್‍ಡಿಎ ಅಭ್ಯರ್ಥಿಗೆ ಬೆಂಬಲ ಸೂಚಿಸಿವುದಾಗಿ ತಿಳಿಸಿದ್ದಾರೆ. ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದರು.

ಹೆಚ್.ಡಿ.ದೇವೇಗೌಡರ ಭೇಟಿ: ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿ ನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.

ಕೆಲವು ದಿನಗಳ ಹಿಂದೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗುವುದು ಖಚಿತ. ಜೆಡಿಎಸ್‍ನ ಬೆಂಬಲ ದ್ರೌಪದಿ ಅವರಿಗೆ ಅವಶ್ಯಕತೆ ಇಲ್ಲ. ಆದ್ರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿದ್ದರು.

Translate »