ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು

ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

March 25, 2019

ಮೈಸೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಪ್ರಮುಖ ಪಕ್ಷಗಳ ಘಟಾನು ಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಂಸದ ರಾದ ಆರ್.ಧ್ರುವನಾರಾಯಣ್, ಪ್ರತಾಪ್ ಸಿಂಹ, ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್, ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಎ.ಮಂಜು ಸೇರಿ ದಂತೆ ಅನೇಕ ಮುಖಂಡರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರತಾಪ್ ಸಿಂಹ: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ನಾಳೆ ಮಧ್ಯಾಹ್ನ 12ರಿಂದ 12.30ರೊಳಗೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿ ದ್ದಾರೆ. ಇದಕ್ಕೂ ಮುನ್ನ ಅವರು ಬೆಳಿಗ್ಗೆ 9 ಗಂಟೆಗೆ ಚಾಮುಂಡಿಬೆಟ್ಟದ ಪಾದದ ಬಳಿ ಇರುವ ಸುತ್ತೂರು ಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಯವರ ಆಶೀರ್ವಾದ ಪಡೆದು, 9.30ಕ್ಕೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು. ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಹಾಗೂ ಪಕ್ಷದ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನಸಭಾ ಸದಸ್ಯ ಸುನೀಲ್ ಸುಬ್ರಮಣಿ ಸೇರಿದಂತೆ ಅನೇಕ ಮುಖಂಡರು ಹಾಜರಿರುವರು.

ಸಿ.ಹೆಚ್.ವಿಜಯಶಂಕರ್: ಕೊಡಗು-ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಹೆಚ್. ವಿಜಯಶಂಕರ್ ನಾಳೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ 11 ಗಂಟೆಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಡಾ. ಹೆಚ್.ಸಿ.ಮಹ ದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಡಾ. ಯತೀಂದ್ರ, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್ ಇನ್ನಿತರರು ಮೆರವಣಿಗೆಯಲ್ಲಿ ಭಾಗವಹಿಸುವರು.

ಹೆಚ್.ಡಿ.ದೇವೇಗೌಡ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದು, ನಾಳೆ ಮಧ್ಯಾಹ್ನ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ನಿಖಿಲ್ ಕುಮಾರಸ್ವಾಮಿ: ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಳೆ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ.

ಆರ್.ಧ್ರುವನಾರಾಯಣ: ಚಾಮರಾಜನಗರ ಸಂಸದ ಆರ್.ಧ್ರುವನಾರಾಯಣ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಳೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಎ.ಮಂಜು: ಇತ್ತೀಚೆಗೆ ತಾನೆ ಕಾಂಗ್ರೆಸ್‍ನಿಂದ ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಚಿವ ಎ.ಮಂಜು ಅವರು ನಾಳೆ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಸೆಣಸಲಿದ್ದಾರೆ.

Translate »