ಗ್ರಾಮೀಣ ಕ್ರೀಡಾಪಟುಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ
ಚಾಮರಾಜನಗರ

ಗ್ರಾಮೀಣ ಕ್ರೀಡಾಪಟುಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ

July 21, 2018

ಗುಂಡ್ಲುಪೇಟೆ:  ‘ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವುದು ಅಭಿನಂದನಾರ್ಹ’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಕೆಲಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಕೆಲಸೂರು ಗ್ರಾಮದ ಯುವಜನ ಮತ್ತು ಸಾಂಸ್ಕೃತಿಕ ಸಂಘದಿಂದ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಈ ಶಾಲೆಯ ವಿದ್ಯಾರ್ಥಿಗಳು ಹಾಗೂ ತರಬೇತುದಾರರ ಸಹಕಾರದಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿರುವ ಹಿಂದೆ ಹೆಚ್ಚಿನ ಪರಿಶ್ರಮವಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿದ ಶಿಕ್ಷಕರು ಸಹಾ ಅಭಿನಂದನಾರ್ಹರಾಗಿದ್ದಾರೆ. ಮೂಲ ಸೌಕರ್ಯಗಳ ಕೊರತೆಯಿದ್ದರೂ ಗ್ರಾಮದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದರು.

ಯುವಜನ ಮತ್ತು ಕ್ರೀಡಾ ಇಲಾಖೆಯು ಇಂತಹ ಶಾಲೆಗಳಿಗೆ ಹೆಚ್ಚಿನ ನೆರವು ನೀಡುವ ಮೂಲಕ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು. ಇವರಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ದೊರಕುವಂತೆ ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಾಗರಾಜು, ನಾಗೇಂದ್ರ, ಪ್ರಜ್ವಲ್ ಹಾಗೂ ಸಿದ್ದರಾಜು ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಪಂಚಾಯಿತಿ ಸದಸ್ಯ ಶಿವನಾಗ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣೇಗೌಡ, ಮುಖಂಡರಾದ ಮಹದೇವಪ್ಪ, ಪುಟ್ಟಯ್ಯ, ಮುಖ್ಯ ಶಿಕ್ಷಕ ಪರಶಿವಪ್ಪ, ಶಿಕ್ಷಕರಾದ ಚಂದ್ರಕುಮಾರ್, ಚಿನ್ನಪ್ಪ, ಎಚ್.ಪರಿಮಳ, ರವಿ, ಕರವೇ ತಾಲೂಕು ಅಧ್ಯಕ್ಷ ಸುರೇಶ್‍ನಾಯ್ಕ ಸೇರಿದಂತೆ ಗ್ರಾಮಸ್ಥರು ಹಾಗೂ ಕ್ರೀಡಾಪಟುಗಳು ಹಾಜರಿದ್ದರು.

Translate »