ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂ ರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮತ್ತು ಇನ್ನಿತರೆ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢ ಶಾಲೆ(ಅನುದಾನಿತ), ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢ ಶಾಲೆ, ಸಿದ್ದಾಪುರ ಪ್ರೌಢ ಶಾಲೆ, ಸಂಪಾಜೆ ಪ್ರೌಢ ಶಾಲೆ, ನಗರದ ಸಂತ ಜೋಸೆಫ್ ಕಾನ್ವೆಂಟ್ ಸಂಯುಕ್ತ ಪ್ರೌಢಶಾಲೆ.

ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಒ.ಎಲ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಶಾಲನಗರ ಫಾತಿಮಾ ಪ್ರೌಢಶಾಲೆ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ ಸಂತ ಮೇರಿಸ್ ಪ್ರೌಢಶಾಲೆ, ಹೆಬ್ಬಾಲೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರ್ಕಾರಿ ಪ್ರೌಢಶಾಲೆ. ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಅನ್ನಮ್ಮ ಪ್ರೌಢ ಶಾಲೆ, ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆ, ಗೋಣಿಕೊಪ್ಪ ಪ್ರೌಢಶಾಲೆ(ಅನುದಾನಿತ), ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಪಾಲಿಬೆಟ್ಟ ಮತ್ತು ತಿತಿಮತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ.