ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ

February 26, 2021

ಮೈಸೂರು,ಫೆ.25(ಪಿಎಂ)- ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಮೈನಾರಿಟೀಸ್ ಫ್ರಂಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಹೆಚ್ಚಳದಿಂದ ಬಡವರು ಮತ್ತು ಮಧ್ಯಮ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸಕ್ಕೆ ತೆರಳಲು ಹಾಗೂ ತಮ್ಮ ಮಕ್ಕಳನ್ನು ಶಾಲೆಗೆ ಬಿಡಲು ಬಡವರು ಹಾಗೂ ಮಧ್ಯಮ ವರ್ಗದವರು ಹೆಚ್ಚಾಗಿ ಬೈಕ್ ಅನ್ನು ಅವಲಂಬಿಸಿದ್ದಾರೆ. ಆದರೆ ಈಗ ಪೆಟ್ರೋಲ್ ದರ ಗಗನಕ್ಕೇರಿರುವ ಕಾರಣ ಬೈಕ್‍ನಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಸಂಕಷ್ಟದಿಂದ ಎದುರಾದ ಎಲ್ಲಾ ತೊಂದರೆಗಳಿಂದ ಈಗಷ್ಟೇ ಹೊರಬರುತ್ತಿರುವ ಜನತೆಗೆ ಹೀಗೆ ಬೆಲೆ ಏರಿಕೆ ಮೂಲಕ ತೊಂದರೆ ನೀಡುವುದು ಸರ್ಕಾರಕ್ಕೆ ಶೋಭೆಯಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹಾಗೂ ಅಡುಗೆ ಅನಿಲ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಹಫೀಜ್ ಸಲೀಮ್, ರಾಜ್ಯ ಯುವ ಘಟಕದ ಅಧ್ಯಕ್ಷ ಘೌಸಿಯಾ ಶರೀಫ್, ಮೈಸೂರು ಜಿಲ್ಲಾ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಸೀಮಾ ಭಾನು, ಜಿಲ್ಲಾಧ್ಯಕ್ಷ ತಜ್ಜಮುಲ್‍ಖಾನ್, ಮೈಸೂರು ಯುವ ಘಟಕದ ಅಧ್ಯಕ್ಷ ತೌಫಿಕ್ ಮಜೀದ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »