ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ

ಮೈಸೂರು,ಅ.20(ಪಿಎಂ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿ ಕಾರಿಗಳು, ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಂ.ಜಿ.ಮಹೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪೌರಕಾರ್ಮಿಕ ಸಂಘದ ಅಧ್ಯಕ್ಷ ಪಳನಿಸ್ವಾಮಿ ಮಾತನಾಡಿ, ಬಿಜೆಪಿ ವಕ್ತಾರ ಮಹೇಶ್ ಪ್ರಚಾರಕ್ಕಾಗಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹಿರಿಯ ರಾಜಕಾರಣಿಯಾಗಿದ್ದು, ಅವರನ್ನು ಟೀಕಿಸುವ ಯಾವ ಅರ್ಹತೆಯನ್ನು ಮಹೇಶ್ ಹೊಂದಿಲ್ಲ. ಅವರು ಸಿದ್ದರಾಮಯ್ಯರ ಕುರಿತು ಏಕವಚನದಲ್ಲಿ ಟೀಕೆ ಮಾಡಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ಧರಿದ್ದೇವೆ. ಧೈರ್ಯವಿದ್ದರೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಹಿರಿಯ ರಾಜಕಾರಣಿ. ಅವರನ್ನು ಟೀಕಿಸುವ ಅರ್ಹತೆಯನ್ನು ಎಂ.ಜಿ.ಮಹೇಶ್ ಹೊಂದಿಲ್ಲ. ಅವಹೇಳಕಾರಿಯಾಗಿ ಮಾತನಾಡಿರು ವುದು ಅವರ ಕೀಳು ಮನಸ್ಥಿತಿಗೆ ಹಿಡಿದ ಕೈಗನ್ನಡಿ. ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ರಾಜ್ಯ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಎಸ್.ಆರ್.ರವಿ, ಕಾಂಗ್ರೆಸ್ ಮುಖಂಡ ಶ್ರೀಧರ್, ಜಿಲ್ಲಾ ಭಗೀರಥ ಸಂಘದ ಅಧ್ಯಕ್ಷ ಯೋಗೀಶ್, ಮುಖಂಡರಾದ ಪ್ರವೀಣ್, ಅನಿಲ್, ಮುರುಗೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.