ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ
ಮೈಸೂರು

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ

July 10, 2018

ಮೈಸೂರು:  ಕಡಿಮೆ ವಿದ್ಯಾರ್ಥಿಗಳ ದಾಖಲೆ ಹೊಂದಿರುವ ಸರ್ಕಾರಿ ಶಾಲೆಗಳನ್ನು ಸಮೀಪದ ಶಾಲೆಗಳಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಮೈಸೂರು ಜಿಲ್ಲಾ ಶಾಖೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಈ ವಿಲೀನಕ್ಕೆ ಕೈ ಹಾಕಿದರೆ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಮಕ್ಕಳನ್ನು ಶಿಕ್ಷಣ ಹಕ್ಕಿನಿಂದ ವಂಚಿಸಿದಂತೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸ್ತವವಾಗಿ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕಾದ ಸಾಮಾಜಿಕ ಹೊಣೆಗಾರಿಕೆ ಸರ್ಕಾರದ ಮೇಲಿದೆ. ಹೀಗಾಗಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ, ಶಿಕ್ಷಕರ ಕೊರತೆ ನೀಗಿಸಬೇಕು. ಜೊತೆಗೆ ವಿಶೇಷ ತರಬೇತಿ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ರಾಜ್ಯ ರೈತ ಸಂಘದ ಮೈಸೂರು ತಾಲೂಕು ಅಧ್ಯಕ್ಷ ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ವಿಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »