ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದಿಗೆ  ಆಗ್ರಹಿಸಿ ನಾಳೆ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದಿಗೆ  ಆಗ್ರಹಿಸಿ ನಾಳೆ ಮೈಸೂರಲ್ಲಿ ಪ್ರತಿಭಟನೆ

September 18, 2018

ಬೇಡಿಕೆ ಈಡೇರದಿದ್ದರೆ ದಸರಾ ಉತ್ಸವ ಬಹಿಷ್ಕಾರ ನಿರ್ಧಾರ: ನಾರಾಯಣ
ಮೈಸೂರು:  ಮೈಸೂರು ಮಹಾನಗರ ಪಾಲಿಕೆಯು ಸರ್ಕಾರದ ಆದೇಶದಂತೆ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸೆ.19ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆ ಈಡೇರಿಸದಿದ್ದರೆ, ಕೆಲಸ ಸ್ಥಗಿತಗೊಳಿಸಿ ದಸರಾ ಮಹೋತ್ಸವ ಬಹಿಷ್ಕರಿಸುವ ಅನಿವಾರ್ಯ ಎದು ರಾಗಲಿದೆ ಎಂದು ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಎಚ್ಚರಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಜು.12ರಂದು ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಪೌರಕಾರ್ಮಿಕ ಪದ್ಧತಿ ರದ್ದುಗೊಳಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಆದರೆ ಸರ್ಕಾರದ ಆದೇಶವನ್ನು ಜಾರಿಗೊಳಿಸುವಲ್ಲಿ ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ ನಿರ್ಲಕ್ಷ್ಯ ತಾಳಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಜೊತೆಗೆ 700 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರನ್ನು ನಿಯೋಜಿಸಬೇಕೆಂಬ ಅವೈಜ್ಞಾನಿಕ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಸಬೇಕು. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.19ರಂದು ಬೆಳಿಗ್ಗೆ 11ಕ್ಕೆ ಪುರಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕೈಗಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪೌರಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದು, 15 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದಿದ್ದರೆ ಅ.3ರಿಂದ ಕೆಲಸ ಕಾರ್ಯ ಸ್ಥಗಿತಗೊಳಿಸಲಾಗುವುದು ಎಂದರು. ದಸರಾ ಮಹೋತ್ಸವದ ಬಗ್ಗೆ ಪೌರಕಾರ್ಮಿಕರಿಗೆ ಅಪಾರ ಗೌರವವಿದೆ. ಆದರೆ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ಅನಿವಾರ್ಯ ಆಗಲಿದ್ದು, ಮುಷ್ಕರ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಮಹಾಸಂಘದ ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ, ನಗರಾಧ್ಯಕ್ಷ ಮಂಚಯ್ಯ, ಪೌರಕಾರ್ಮಿಕ ಮುಖಂಡರಾದ ಆರ್.ಆರ್.ರಮೇಶ್ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »