ಮೈಸೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನದ ಪ್ರಸಾದ ದಲ್ಲಿ ವಿಷ ಮಿಶ್ರಣ ಮಾಡಿ 17 ಮಂದಿಯ ಸಾವಿಗೆ ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಎಸ್‍ಐಟಿಯಂತಹ ವಿಶೇಷ ತನಿಖಾ ತಂಡ ರಚಿಸಿ ಆರೋಪಿಗಳಿಗೆ ಜಾಮೀನು ಸಿಗದಂತೆ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರ ಕುಟುಂಬದ ಸದಸ್ಯರಿಗೆ ನೆರವು ನೀಡಬೇಕೆಂದು ಧರಣಿ ನಿರತರು ಒತ್ತಾಯಿಸಿದರು. ದೇವರ ಪ್ರಸಾದದಲ್ಲಿ ವಿಷ ಹಾಕಿ ಭಕ್ತರ ಪ್ರಾಣದ ಜೊತೆ ಚೆಲ್ಲಾಟವಾಡಿ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ, ದೊಡ್ಡಯ್ಯ, ಅಂಬಿಕಾ, ಮಾದೇಶ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕೆಂದು ಅವರು ಒತ್ತಾಯಿಸಿದರು. ದಸಂಸ ಮೈಸೂರು ಜಿಲ್ಲಾ ಸಂಚಾಲಕ ಶಿವಣ್ಣ, ಮಹದೇವಯ್ಯ, ಸೋಮಯ್ಯ ಮಲೆಯೂರು, ಮಾದೇವು, ನಟರಾಜು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
\