ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸೂಕ್ತ ನೆರವು ಕಲ್ಪಿಸಿ: ಹೆಚ್‍ಡಿಡಿ
ಹಾಸನ

ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸೂಕ್ತ ನೆರವು ಕಲ್ಪಿಸಿ: ಹೆಚ್‍ಡಿಡಿ

August 22, 2018

ಸಕಲೇಶಪುರ:  ಸತತ ಮಳೆಯಿಂದಾಗಿ ಹಾನಿಗೀಡಾಗಿರುವ ಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸ್ಪಂದಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸುವಂತೆ ವಿವಿಧ ಇಲಾಖಾಧಿಕಾರಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೂಚನೆ ನೀಡಿದರು.

ಮಹಾ ಮಳೆಯಿಂದಾಗಿ ಹಾನಿಗೀಡಾಗಿರುವ ತಾಲೂಕಿನ ಉಚ್ಚಂಗಿ, ಹಿಜ್ಜನಹಳ್ಳಿ, ಮಾಗೇರಿ, ಬಿಸಲೆ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರಲ್ಲದೆ, ವಿಕೋಪದಿಂದ ಹಾನಿಗೀಡಾಗಿರುವ ಪ್ರದೇಶಗಳ ಗಂಭೀರತೆಗೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕಳವಳ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಅವರು, ತಾಲೂಕಿನ ವಿವಿಧೆಡೆ ಗುಡ್ಡಗಳು ಕುಸಿ ದಿದ್ದು, ರಸ್ತೆಗಳು ಹಾನಿಗೀಡಾಗಿವೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಸ್ತಿಪಾಸ್ತಿಗಳು ನಾಶವಾಗಿದೆ. ಕಾಫಿ ಬೆಳೆ ಸಂಪೂರ್ಣ ನಷ್ಟವಾಗಿದೆ. ಸದ್ಯ ಈ ಜನರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಂದಿಸುತ್ತಿದ್ದು, ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ, ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸುಪ್ರದೀಪ್ ಯಜಮಾನ್, ಸದಸ್ಯರಾದ ಉಜ್ಮರಿಜ್ವಿ ಸುದರ್ಶನ್, ಉಪವಿಭಾಗಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಗಿರೀಶ್ ವಣಗೂರು ಗ್ರಾಮಪಂಚಾಯ್ತಿ ಅಧ್ಯಕ್ಷ ಆನಂದ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Translate »