ಇಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ
ಮೈಸೂರು

ಇಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

January 19, 2020

ಮೈಸೂರು,ಜ.18(ಪಿಎಂ)-ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಜ.19ರಂದು ನಡೆಯಲಿದ್ದು, ಮೈಸೂರು ಜಿಲ್ಲೆಯಲ್ಲಿ 5 ವರ್ಷದೊಳಗಿನ 2,43, 641 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಸಾರ್ವಜನಿಕ ಪ್ರದೇಶಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1,652 ಲಸಿಕಾ ಬೂತ್‍ಗಳನ್ನು ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ. ಇದರ ಜೊತೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲೂ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

ಲಸಿಕಾ ವಂಚಿತ ಮಕ್ಕಳಿಗಾಗಿ ಮೈಸೂರು ನಗರದಲ್ಲಿ ಜ.20ರಿಂದ 23ರವರೆಗೆ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜ.20 ರಿಂದ 22ರವರೆಗೆ ನರ್ಸ್‍ಗಳು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಿದ್ದಾರೆ.

ಈ ಸಂಬಂಧ `ಮೈಸೂರು ಮಿತ್ರ’ನೊಂ ದಿಗೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿ ಕಾರಿ ಡಾ.ವೆಂಕಟೇಶ್, ಲಸಿಕಾ ಕಾರ್ಯ ಕ್ರಮಕ್ಕಾಗಿ 338 ಮೇಲ್ವಿಚಾರಕರು ಹಾಗೂ 6,608 ವ್ಯಾಕ್ಸಿನೇಟರ್‍ಗಳನ್ನು ನಿಯೋ ಜಿಸಲಾಗಿದೆ. ಜಿಲ್ಲೆಯಲ್ಲಿ 742 ಪ್ರದೇಶ ಗಳನ್ನು ಹೈರಿಸ್ಕ್ ಏರಿಯಾ ಎಂದು ಗುರುತಿಸಿದ್ದು, ಈ ಪ್ರದೇಶಗಳಲ್ಲಿ 72 ಸಾವಿರ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಮೊದಲ ದಿನವಾದ ಜ.19ರಂದೇ ಪೋಷಕರು ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

Translate »