ಮೈಸೂರು,ಸೆ.9(ಎಸ್‍ಪಿಎನ್)- ಮೈಸೂರು ಮಹಾ ನಗರಪಾಲಿಕೆಯ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣಾ ವಿಭಾಗಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎ.ರಾಮದಾಸ್, ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು, ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ. ಸರ್ಕಾರದಿಂದ ಉಚಿತವಾಗಿ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದಿದ್ದರೂ ಜನತೆಗೆ ಮಾತ್ರ ಉಚಿತವಾಗಿ ಲಭ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರಲ್ಲದೆ, ಉಚಿತವಾಗಿ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಎಲ್ಲಾ ವಲಯ ಕಚೇರಿಗಳಲ್ಲೂ ಲಭ್ಯವಾಗಲು ವ್ಯವಸ್ಥೆ ಮಾಡಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರಿಗೆ ಸೂಚಿಸಿದರು.