ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ನಿರ್ದೇಶನ ನೀಡಿದೆ.

ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತರ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ನೋಂದಣಿಯಾಗದೆ ಇರುವವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. ಮಾಜಿ ಯೋಧರು, ವಿಧುರರು, ಅಂಗವಿಕಲರು ಮತ್ತು ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು, ಯಾವುದೇ ಯೋಜನೆ, ಇಲಾಖೆಯಿಂದ ವಸತಿ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಜುಲೈ 23 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆಧಾರ್‍ಕಾರ್ಡ್, ಪಡಿತರ ಚೀಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಡನೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.