ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ

July 29, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜೆಡಿಎಸ್ ಯುವ ಮುಖಂಡ ಜಿ.ಡಿ.ಹರೀಶ್‍ಗೌಡರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಮೈಸೂರು ಜಿಲ್ಲಾ ಜೆಡಿಎಸ್ ವಕ್ತಾರ ದೂರ ಮಂಜುನಾಥ್ ಒತ್ತಾಯಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸಿರುವ ಜಿ.ಡಿ.ಹರೀಶ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದ ಹರೀಶ್‍ಗೌಡ ಅವರು ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಯುವ ಹಾಗೂ ಸಕ್ರಿಯ ಸಂಘಟಕರೂ ಆಗಿರುವ ಜಿ.ಡಿ.ಹರೀಶ್‍ಗೌಡ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಮುಂಬರುವ ದಿನಗಳಲ್ಲಿ ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜೆಡಿಎಸ್ ಅನ್ನು ಮತ್ತಷ್ಟು ಬಲಪಡಿಸಬಹುದಾಗಿದೆ. ಅಲ್ಲದೆ ಯುವ ಮತದಾರರನ್ನು ಜೆಡಿಎಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವುದಕ್ಕೆ ಸಾಧ್ಯವಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

Translate »