ಬೆಂಗಳೂರು, ಅ.9- ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ದೃಶ್ಯ ಮಾಧ್ಯಮಗಳಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಬಂಧ ಹೇರಿದ್ದಾರೆ. ವಿಧಾನ ಸೌಧದಲ್ಲಿ ಗುರುವಾರದಿಂದ 3 ದಿನ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಖಾಸಗಿ ದೃಶ್ಯ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿ ಸ್ಪೀಕರ್ ಕಾಗೇರಿ ಆದೇಶ ಹೊರಡಿಸಿದ್ದಾರೆ. ಸ್ಪೀಕರ್ ಅವರ ಈ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ಅಧಿವೇಶನ ನಡೆಸುತ್ತಿದೆ. ಬೆಳಗಾವಿಯಲ್ಲಿ ನಡೆಸಬೇಕಾದ ಅಧಿವೇಶನವನ್ನು ಪ್ರವಾಹದ ನೆಪವೊಡ್ಡಿ ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ.
ಈ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗುತ್ತಿದ್ದ ಪ್ರತಿಪಕ್ಷಗಳಿಗೆ ಈಗ ಮತ್ತೊಂದು ಅಸ್ತ್ರ ಸಿಕ್ಕಿದೆ. ಜನಪ್ರತಿನಿಧಿಗಳ ಸೋಮಾರಿತನ ಬಯಲುಮಾಡುವುದೇ ತಪ್ಪಾ ಕಲಾಪದ ವೇಳೆ ನಿದ್ರೆ ಮಾಡುವುದನ್ನು ತೋರಿಸುವುದೇ ತಪ್ಪಾ ಸದನದಲ್ಲಿ ಬ್ಲೂ ಫಿಲ್ಮ್ ನೋಡಿದ್ದನ್ನು ಹಾಗೂ ಕಿತ್ತಾಡೋದನ್ನು ತೋರಿಸಿದ್ದೇ ತಪ್ಪಾ ಮಾಧ್ಯಮಗಳ ಮೇಲ್ಯಾಕೆ ಸ್ಪೀಕರ್‍ಗೆ ಈ ಕೋಪ ಎನ್ನುವ ಪ್ರಶ್ನೆ ಎದ್ದಿದೆ. ಈ ಹಿಂದೆಯೂ ಬಿಜೆಪಿ ಸರ್ಕಾರ ಆಡಳಿತ ಅವಧಿಯಲ್ಲಿ ವಿಧಾನಸೌಧ ಕಲಾಪದಲ್ಲಿ ದೃಶ್ಯ ಮಾಧ್ಯಮ ನಿರ್ಬಂಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಅಂದು ಕೂಡ ವಿರೋಧ ಪಕ್ಷ ಹಾಗೂ ಮಾಧ್ಯಮ ಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿಂತನೆಯನ್ನು ಕೈಬಿಡಲಾಗಿತ್ತು. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧಾನಸೌಧ ಕಲಾಪದಲ್ಲಿ ದೃಶ್ಯ ಮಾಧ್ಯಮ ನಿರ್ಬಂಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಬಿಜೆಪಿ ನಾಯಕರು ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನಕ್ಕೆ ದೃಶ್ಯ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿದೆ.
ನಮ್ಮವರಿಗೆ ನಾನು ಅಧಿಕಾರ ನಡೆಸುವುದು ಇಷ್ಟ ಇಲ್ಲವಾ ನಮ್ಮವರೇ ನಮ್ಮ ಮೇಲೆ ಸಮಸ್ಯೆ ಹುಟ್ಟು ಹಾಕುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಮಾಧ್ಯಮ ನಿರ್ಬಂಧ ಪ್ರಸ್ತಾವನೆಯನ್ನು ಬಿಜೆಪಿ ವಿರೋಧಿಸಿತ್ತು. ಈಗ ಬಹಳಷ್ಟು ಸಮಸ್ಯೆಗಳು ಇವೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಮೇಲೆ ನಮ್ಮ ಸವಾರಿ ಬೇಕೇ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ ಎನ್ನಲಾಗಿದೆ. ನಾವು ವಿರೋಧ ಪಕ್ಷಗಳ ಎದುರಿಸಬೇಕು, ಆ ಕಡೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮ್ಮ ಸರ್ಕಾರದ ಅವಧಿಯಲ್ಲೇ ಬದಲಾವಣೆ ಹೆಸರಿನಲ್ಲಿ ನಿರ್ಬಂಧ ಸರಿಯಿಲ್ಲ ಎಂದು ಸಿಎಂ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಪಕ್ಷದ ಕೆಲ ಹಿರಿಯ ನಾಯಕರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.