ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ
ಮೈಸೂರು

ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ

May 14, 2020

ಖಾಸಗಿ ಆಸ್ಪತ್ರೆಗಳಿಗೆ ವಿಧಿಸಿದ್ದ ನಿರ್ಬಂಧ ಸಡಿಲ

ಬೆಂಗಳೂರು, ಮೇ 13- ಖಾಸಗಿ ಆಸ್ಪತ್ರೆಗಳಿಗೆ ವಿಧಿಸಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದ್ದು, ಗುರುವಾರ ದಿಂದ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಆರಂಭಿಸಲು ಆಸ್ಪತ್ರೆಗಳ ಆಡಳಿತ ಮಂಡಳಿಗಳು ಒಪ್ಪಿಗೆ ಸೂಚಿಸಿವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ವಿಕಾಸ ಸೌಧದಲ್ಲಿ 43 ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಹಾಗೂ ತಜ್ಞರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಿಗೆ ವಿಧಿಸಿದ್ದ ಹಲವು ನಿರ್ಬಂಧಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಕೋವಿಡ್-19 ರೋಗಿಗಳು ಆಸ್ಪತ್ರೆಗೆ ಹೋದರೆ ಸದರಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡುವ ಆತಂಕವನ್ನು ನಿವಾರಣೆ ಮಾಡಲಾಗಿದೆ. ಅಂತಹ ಆಸ್ಪತ್ರೆಗಳನ್ನು ಸೀಲ್‍ಡೌನ್ ಮಾಡಲು ಸಾನಿಟೈಸ್ ಮಾಡಲಾಗುತ್ತದೆ. ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತ ದೆಯೇ ಹೊರತು ಸರ್ಕಾರಿ ಕ್ವಾರಂಟೈನ್‍ನಲ್ಲಿ ಇಡುವುದಿಲ್ಲ ಎಂದು ಅವರು ಹೇಳಿದರು.

ಗರ್ಭಿಣಿಯರು ಕಂಟೈನ್ಮೆಂಟ್ ಝೋನ್‍ನಿಂದ ಬಂದರೆ ಮಾತ್ರ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಇಲ್ಲದಿದ್ದರೆ ಕೋವಿಡ್ ಪರೀಕ್ಷೆ ಅವಶ್ಯಕತೆ ಇಲ್ಲ. ಆಕಸ್ಮಿಕ ವಾಗಿ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-19 ರೋಗಿ ಬಂದರೆ ಆತನನ್ನು ಪ್ರತ್ಯೇಕ ವಾರ್ಡ್‍ನಲ್ಲಿಟ್ಟು ಚಿಕಿತ್ಸೆ ಕೊಡಬೇಕು. ಅನಂತರ ಕೊರೊನಾ ರೋಗಿಯನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಯಾವುದೇ ಕಾರಣಕ್ಕೂ ಚಿಕಿತ್ಸೆ ನಿರಾಕರಿಸ ಬಾರದು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಒಂದು ಪ್ರತ್ಯೇಕ ವಾರ್ಡ್‍ಅನ್ನು ಕೊರೊನಾ ರೋಗಿಗಳಿಗೆ ಮೀಸಲಿಡಬೇಕು. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರಿದರೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳು ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದ ಸಚಿವರು, ನಾಳೆಯಿಂದ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳನ್ನು ತೆರೆಯಲು ಆಡಳಿತ ಮಂಡಳಿಗಳು ಒಪ್ಪಿಗೆ ನೀಡಿವೆ ಎಂದರು. ಕೊರೊನಾ ಮಾರಣಾಂತಿಕ ಖಾಯಿಲೆ ಅಲ್ಲ. ಅದರ ಬಗ್ಗೆ ಅನಗತ್ಯ ಭಯ ಬೇಡ ಎಂದ ಅವರು, ಕೊರೊನಾ ಇಲ್ಲದ ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕಬಾರದು. ಒಂದು ವೇಳೆ ರೋಗಿಗಳಿಗೆ ತೊಂದರೆ ಕೊಟ್ಟರೆ ಅಂತಹ ಖಾಸಗಿ ಆಸ್ಪತ್ರೆಗಳ ಮೇಲೂ ಕ್ರಿಮಿನಲ್ ಕೇಸ್ ಹಾಕಲು ತೀರ್ಮಾನಿಸಲಾಗಿದೆ ಎಂದು ಶ್ರೀರಾಮುಲು ತಿಳಿಸಿದರು.

 

 

 

Translate »