ಬೈಕ್‍ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಮಡಿಕೇರಿ: ಬೈಕ್‍ನಲ್ಲಿ ಮನೆಗೆ ತೆರಳುವ ಸಂದರ್ಭ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ನಗರದ ಮಂಗಳೂರು ರಸ್ತೆ ನಿವಾಸಿ ಡಿ.ಎಸ್.ರಾಜಾ ಆಲಿಯಾಸ್ ಆರ್ಮುಘ(32) ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ. ಆ.8ರ ರಾತ್ರಿ 10 ಗಂಟೆಗೆ ಡಿ.ಎಸ್.ರಾಜಾ ದ್ವಿಚಕ್ರ ವಾಹನದಲ್ಲಿ ಮಂಗಳೂರು ರಸ್ತೆಯ ಕೆಳಭಾಗದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಎನ್ನಲಾಗಿದೆ.

ಈ ಸಂದರ್ಭ ಆಯತಪ್ಪಿ ಕೆಳಕ್ಕೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ.9ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.