ಮೈಸೂರು: ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧೀ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದ ಜನಸಂಖ್ಯೆ ಪೈಕಿ 80 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಪರಿಶಿಷ್ಟ ವರ್ಗಕ್ಕೆ ಪ್ರಸ್ತುತ ಕೇವಲ ಶೇ.3ರಷ್ಟು ಮೀಸಲಾತಿ ನೀಡಲಾಗಿದೆ. ಪರಿಣಾಮ ಪರಿಶಿಷ್ಟ ವರ್ಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿಯುವಂತಾಗಿದ್ದು, ಈ ಹಿಂದೆ ಆಡಳಿತ ನಡೆಸಿದ ಸರ್ಕಾರಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವಂತೆ ರಾಜ್ಯ ಸರ್ಕಾರವೂ ಪರಿಶಿಷ್ಟ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಬೇಕೆಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ಕೆ.ಗೋಪಾಲ್, ಶ್ರೀಧರ ನಾಗವಲ, ಎಂ.ಶಿವಪ್ರಕಾಶ್, ಮಾದೇಶ, ತಿಮ್ಮನಾಯಕ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.