ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ

ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅ ಚ್ಚುಕಟ್ಟಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಇದೇ ಮೊದಲ ಬಾರಿಗೆ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸುವುದರಿಂದ ಸರಳವಾಗಿ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಹಡಪದ ಅಪ್ಪಣ್ಣ ಅವರ ಬಗ್ಗೆ ವಿಶೇಷ ಉಪನ್ಯಾಸ ವನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ನಾಡಗೀತೆ ಹಾಗೂ ರೈತ ಗೀತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವ್ಯವಸ್ಥೆ ಮಾಡಲು ತಿಳಿಸಲಾಯಿತು.

ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ ಶಿವಣ್ಣ ಮಾತನಾಡಿ, ಎಲ್ಲಾ ಗಣ್ಯರ ಜಯಂತಿಯನ್ನು ಜಿಲ್ಲಾಡಳಿತ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಅದರಂತೆ ಶಾಲಾ-ಕಾಲೇಜುಗಳಲ್ಲೂ ಅವರ ಜೀವನದ ಬಗ್ಗೆ ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.