ಕುಶಾಲನಗರ: ಮೈತ್ರಿ ಸರ್ಕಾರದಿಂದ ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಬಿಡಿಗಾಸನ್ನು ನೀಡದೆ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಆರೋಪಿಸಿದರು.
ಕುಶಾಲನಗರದಲ್ಲಿ ಪಟ್ಟಣ ಪಂಚಾಯಿತಿ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿ ಪರ ಮನೆ ಮನೆಗಳಿಗೆ ಹೋಗಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದ ಕೊಡಗು ಜಿಲ್ಲೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯಿಸಲು ಮೈಸೂರು-ಕೊಡಗು ಸಂಸದರೂ ಸೇರಿ ದಂತೆ ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು, ಮಂತ್ರಿಗಳು ಕೇಂದ್ರ ಸರ್ಕಾರದೊಂದಿಗೆ ಸರಿಯಾದ ಸಂವಹನ ನಡೆಸದೆ ನಿರ್ಲಿಪ್ತ ಮನೋಭಾವನೆ ತಳೆದದ್ದು ಕಾರಣವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಜನ ಅದಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ ಎಂದರು.
ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳಿಗೆ ಚುನಾ ವಣೆ ನಡೆಯುತ್ತಿದ್ದು, ಸೋಮವಾರಪೇಟೆ, ವಿರಾಜಪೇಟೆ ಪಟ್ಟಣ ಪಂಚಾಯ್ತಿಗಳಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ. ಆದರೆ, ಕುಶಾಲನಗರ ಪಟ್ಟಣ ಪಂಚಾಯ್ತಿ ಚುನಾವಣೆಯ ಪಕ್ಷದ ಸಿದ್ಧತೆಗಳು ಮೊದಲೇ ಪ್ರಾರಂಭ ವಾದ ಕಾರಣ ಮೈತ್ರಿಯ ಚಿಂತನೆಯಿಂದ ದೂರ ನಿಲ್ಲಬೇಕಾಯಿತು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಪಟ್ಟಣ ಪಂಚಾಯ್ತಿ ಚುನಾವಣೆಗೆ ಒಳ್ಳೆಯ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗಿದೆ. ಅಭ್ಯರ್ಥಿಗಳ ಬಗ್ಗೆ ಮತದಾರರು ನಂಬಿಕೆಯಿರಿಸಿ ಮತ ನೀಡಲಿ ದ್ದಾರೆ. ಕುಶಾಲನಗರ ಪಟ್ಟಣ ಪಂಚಾಯ್ತಿಗೆ ಸ್ಪರ್ಧಿಸಿರುವ 16 ಅಭ್ಯರ್ಥಿಗಳಲ್ಲಿ ಕನಿಷ್ಟ 10 ಅಭ್ಯರ್ಥಿಗಳು ಜಯಗಳಿಸಿ ಪಪಂ ಅಧಿಕಾರವನ್ನು ಪಡೆದುಕೊಳ್ಳಲಿದ್ದಾರೆ ಎಂದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ವಿ.ಪಿ.ಶಶಿಧರ್, ಜಿಪಂ ಸದಸ್ಯೆ ಕೆ.ಪಿ.ಚಂದ್ರಕಲಾ, ಕುಶಾಲನಗರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜು ನಾಥ್ ಗುಂಡುರಾವ್, ನಗರ ಕಾಂಗ್ರೇಸ್ ಅಧ್ಯಕ್ಷ ಜೋಸೇಫ್ ವಿಕ್ಟರ್ ಸೋನ್, ಎಪಿಎಂಸಿ ಅಧ್ಯಕ್ಷ ರಮೇಶ್, ಸದಸ್ಯ ಭೀಮಯ್ಯ, ಪಕ್ಷದ ಅಭ್ಯರ್ಥಿಗಳು, ಕಾರ್ಯಕರ್ತರು ಇದ್ದರು.