ಗುಣಮಟ್ಟದ ಸಂಶೋಧನೆಯಿಂದಷ್ಟೇ ಶಿಕ್ಷಣ ಸಂಸ್ಥೆಗಳ ಬೆಳವಣಿಗೆ: ಶಾರದಾ ವಿಲಾಸ ಫಾರ್ಮಸಿ ಕಾಲೇಜು ರಜತ ಮಹೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಮತ
ಮೈಸೂರು

ಗುಣಮಟ್ಟದ ಸಂಶೋಧನೆಯಿಂದಷ್ಟೇ ಶಿಕ್ಷಣ ಸಂಸ್ಥೆಗಳ ಬೆಳವಣಿಗೆ: ಶಾರದಾ ವಿಲಾಸ ಫಾರ್ಮಸಿ ಕಾಲೇಜು ರಜತ ಮಹೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಮತ

February 28, 2020

ಮೈಸೂರು,ಫೆ.27(ವೈಡಿಎಸ್)-ಗುಣಮಟ್ಟದ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಲು ಸಾಧ್ಯ ಎಂದು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಪಟ್ಟರು.

ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಗುರುವಾರ ಆಯೋಜಿಸಿದ್ದ `ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ರಜತ ಮಹೋತ್ಸವ ಹಾಗೂ ಪದವಿ ಪ್ರದಾನ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿರುವ ಶಿಕ್ಷಣ ಸಂಸ್ಥೆಗಳು ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಜತೆಗೆ ಪ್ರತಿ ವರ್ಷ ಹಲವು ಸಂಶೋಧನಾ ಪ್ರಬಂಧಗಳು ಮಂಡನೆಯಾಗುತ್ತವೆ. ಹಾಗಾಗಿ ಅಲ್ಲಿನ ಶಿಕ್ಷಣ ಸಂಸ್ಥೆಗಳು ನಮ್ಮಲ್ಲಿನ ವಿದ್ಯಾರ್ಥಿಗಳನ್ನು ಸೆಳೆಯುತ್ತವೆ ಎಂದು ತಿಳಿಸಿದರು.

ವಿಶ್ವದ 20 ಸಾವಿರ ವಿವಿಗಳ ಪಟ್ಟಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿಗೆ 1,462ನೇ ಸ್ಥಾನ ಲಭಿಸಿದೆ. ಈ ಪಟ್ಟಿಯಲ್ಲಿ 500ರೊಳಗೆ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಎಂದರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ) ಮಾತ್ರ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳಿದ್ದು, ಅವರನ್ನು ಸರಿದಾರಿಯಲ್ಲಿ ಕರೆದೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟ ಹೆಚ್ಚಿಸಿದರೆ ಮುಂದಿನ 10 ವರ್ಷಗಳಲ್ಲಿ ಭಾರತದ ಹಲವು ವಿವಿಗಳು 500ನೇ ಸ್ಥಾನದೊಳಗೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಕಾಲೇಜು ಮುಗಿಸಿ ವೃತ್ತಿಜೀವನ ಆರಂಭಿಸಿದ ನಂತರ ಹೊಸ ವಿಷಯ ತಿಳಿದುಕೊಳ್ಳುವುದನ್ನು ನಿಲ್ಲಿಸಬಾರದು. ಸದಾ ಹೊಸತನಕ್ಕೆ ಹಂಬಲಿಸಬೇಕು ಎಂದು ಕಿವಿಮಾತು ಹೇಳಿದರು. ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಡಾ.ಬಿ. ಸುರೇಶ್ ಮಾತನಾಡಿ, ಶಾರದಾ ವಿಲಾಸ ಫಾರ್ಮಸಿ ಕಾಲೇಜು 25 ವರ್ಷ ಪೂರೈಸಿ ರುವುದು ಮಹತ್ವದ ಮೈಲಿಗಲ್ಲು. ಆದರೆ, ಇನ್ನೊಂದೆಡೆ ವಿದ್ಯಾರ್ಥಿಗಳೇ ಬರುತ್ತಿಲ್ಲ ಎಂದು ಇಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ. ಇಂದಿನ ವಿದ್ಯಾರ್ಥಿ ಗಳು ಉತ್ತಮ ಗುಣಮಟ್ಟದ ಶಿಕ್ಷಣ ಬಯಸುತ್ತಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 110 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು. ಹಿರಿಯ ವಿಜ್ಞಾನಿ ಡಾ.ವಿ.ಪ್ರಕಾಶ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಜಿ.ಆರ್.ಚಂದ್ರಶೇಖರ್, ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಕಾರ್ಯದರ್ಶಿ ಹೆಚ್.ಕೆ.ಶ್ರೀನಾಥ್, ಶಾರದಾ ವಿಲಾಸ ಫಾರ್ಮಸಿ ಕಾಲೇಜು ಪ್ರಾಂಶುಪಾಲ ಡಾ.ಹನುಮಂತಾಚಾರ್ ಜೋಷಿ, ಶೋಭಾರಾಣಿ ಮತ್ತಿತರರು ಉಪಸ್ಥಿತರಿದ್ದರು.

Translate »