ಮೈಸೂರು, ಆ.5(ಪಿಎಂ)- ಕೊರೊನಾ ತೀವ್ರವಾಗಿ ವ್ಯಾಪಿಸು ತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನೋತ್ಸವವನ್ನು ಕೇಂದ್ರ ಗೃಹ ಮಂತ್ರಾಲಯದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ ತಿಳಿಸಿದರು.
ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಬುಧವಾರ ಹಮ್ಮಿಕೊಂಡಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಬಾರಿಯಂತೆ ಮೈಸೂರು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಗುವುದು. ಆದರೆ ಹೆಚ್ಚು ಜನ ಸಂದಣಿಗೆ ಅವಕಾಶ ನೀಡದೇ, ಸಾಮಾಜಿಕ ಅಂತರ ಕಾಯ್ದು ಕೊಂಡು ಸರಳವಾಗಿ ಆಚರಿಸಲಾಗುವುದು ಎಂದು ಹೇಳಿದರು.
ಅಂದು ಬೆಳಗ್ಗೆ 9ಕ್ಕೆ ಗಣ್ಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಲಿದೆ. ರಾಜ್ಯ ಗೃಹರಕ್ಷಕ ದಳ, ಹಿರಿಯ ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಕವಾಯತು ನಡೆಸುವುದು, ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಲಾಗುವುದು ಎಂದರು.
ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆ ಶಾಲಾ ಮಕ್ಕಳ ಆರೋ ಗ್ಯದ ಹಿತದೃಷ್ಟಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕೈಬಿಡ ಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಿರಿಯ ನಾಗರಿಕ ರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿಲ್ಲ. ಕೊರೊನಾ ವಾರಿಯರ್ ಗಳಾದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಮತ್ತು ಕೊರೊನಾ ಸೋಂಕಿನಿಂದ ಗುಣಮುಖ ರಾದವರನ್ನು ಆಹ್ವಾನಿಸಿ ಗೌರವಿಸಲಾಗುವುದು ಎಂದರು.
ಅಂದು ಬೆಳಗ್ಗೆ 8.30ರೊಳಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಇಲಾಖೆ ಕಚೇರಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಿ, ಸರಳ ಹಾಗೂ ಸಾಂಕೇತಿಕವಾಗಿ ಸ್ವಾತಂತ್ರ್ಯೋತ್ಸವ ಆಚರಿಸಬೇಕು. ಸರ್ಕಾರಿ ಅಧಿಕಾರಿಗಳು ಸ್ವಯಂಪ್ರೇರಣೆಯಿಂದ ಪಂಜಿನ ಕವಾ ಯತು ಮೈದಾನಕ್ಕೆ ಆಗಮಿಸಬೇಕು ಎಂದು ಸೂಚನೆ ನೀಡಿದರು.
ಮುಡಾ ಆಯುಕ್ತ ಡಿ.ಬಿ.ನಟೇಶ್, ಜಿಪಂ ಉಪ ಕಾರ್ಯದರ್ಶಿ ಪ್ರೇಮ್‍ಕುಮಾರ್, ಡಿಡಿಪಿಐ ಪಾಂಡುರಂಗ, ಆಹಾರ-ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಜಂಟಿ ನಿರ್ದೇಶಕ ಪಿ.ಶಿವಣ್ಣ, ಪಿಯು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಎಸ್.ಮಂಜುಳಾದೇವಿ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ಪದ್ಮ, ಕನ್ನಡ-ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ ಸಭೆಯಲ್ಲಿದ್ದರು.