ಇಂದು ಸಿಡಬ್ಲ್ಯೂಸಿ ಸಭೆ
ನವದೆಹಲಿ,ಆ.23-ಪಕ್ಷದ ಹಿತ ದೃಷ್ಟಿ ಯಿಂದ ಅಗತ್ಯ ಬಿದ್ದರೆ ಅಧ್ಯಕ್ಷ ಸ್ಥಾನದಿಂದ ಕೆಳ ಗಿಳಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ನಾಯಕನ ಅಗತ್ಯವಿದೆ. ಹೀಗಾಗಿ ಉನ್ನತ ಮಟ್ಟದ ಹುದ್ದೆಯಲ್ಲಿ ಜನರಿಗೆ ಹೆಚ್ಚು ಪರಿಚಯವಾಗಿರುವ ಹಾಗೂ ಪಕ್ಷದಲ್ಲಿ ಹೆಚ್ಚು ಆಕ್ಟಿವ್ ಆಗಿರುವ ನಾಯಕ ನನ್ನು ಆಯ್ಕೆ ಮಾಡಬೇಕು ಎಂದು 23 ಕಾಂಗ್ರೆಸ್ ನಾಯಕರು ಒಟ್ಟಾಗಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಔಪಚಾರಿಕ ಉತ್ತರವನ್ನು ಕಳುಹಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಒಂದು ವರ್ಷದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವಧಿ ಪೂರ್ಣ ಗೊಂಡಿದೆ. ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಯಸುತ್ತಿದ್ದೇನೆ. ಜೊತೆಗೆ ಪಕ್ಷವು ಹೊಸಬರನ್ನು ಆರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ಸೋಮವಾರ ನಡೆಯಲಿದೆ. ಕಾಂಗ್ರೆಸ್ ಮುಖಂಡರು ಸೂಚಿಸಿದ ಸಾಂಸ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಪತ್ರಕ್ಕೆ ಪ್ರತಿಕ್ರಿಯೆಯಾಗಿ ಈ ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.