ಮಡಿಕೇರಿ: ಜಿಲ್ಲೆಯ ಬೂತ್ ಮಟ್ಟದ ಮತಗಟ್ಟೆಗಳಲ್ಲಿ ಎರಡನೇ ಹಂತದಲ್ಲಿ ನಾಳೆ ಮತದಾರರ ವಿಶೇಷ ನೋಂದಣಿ ಅಭಿಯಾನ ನಡೆಯಲಿದ್ದು, ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ಕೋರಿದ್ದಾರೆ.
ಜಿಲ್ಲೆಯಲ್ಲಿ 18 ರಿಂದ 19 ವರ್ಷದೊಳಗಿನ ಯುವ ಮತದಾರರ ಸಂಖ್ಯೆ ಕಡಿಮೆ ಇದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಂತಾಗಬೇಕು.
ಇವಿಎಂ ಮತ್ತು ವಿವಿಪ್ಯಾಟ್ ಮತಯಂತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜನವರಿ 1, 2019ಕ್ಕೆ 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದ್ದು, ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳು ಮತಗಟ್ಟೆಯಲ್ಲಿ ಹಾಜರಿದ್ದು, ನಮೂನೆ-6, ನಮೂನೆ-6 ಎ, ನಮೂನೆ-7, ನಮೂನೆ-8, ನಮೂನೆ-8 ಎ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಯಾಗದೆ ಇರುವ ಮತದಾರರು ನಮೂನೆ-6 ರಲ್ಲಿ ಹಾಗೂ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾ ವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಮತ್ತು ಮತದಾರರ ಗುರು ತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ಎ ರಲ್ಲಿ ಹಾಗೂ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ಎ ರಲ್ಲಿ ಅರ್ಜಿಗಳನ್ನು ಪೂರಕ ದಾಖಲೆಗಳೊಂದಿಗೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗೆ ಸಲ್ಲಿಸ ಬಹುದಾಗಿದೆ ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ.