ಮೈಸೂರು ಭೇಟಿ ಮೊದಲ ದಿನ ಸಚಿವ ಜಿ.ಟಿ.ದೇವೇಗೌಡರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ

ಮೈಸೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವರಾಗಿದ್ದು, ಜಿ.ಟಿ.ದೇವೇಗೌಡರು ಇಂದು ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರಾದ ನಂತರ ಇದೇ ಪ್ರಪ್ರಥಮ ಬಾರಿಗೆ ಮೈಸೂರಿಗೆ ಆಗಮಿಸಿದ ಅವರು, ತಮ್ಮ ಕುಟುಂಬದ ಸದಸ್ಯರೊಂದಿಗೆ ಮೊದಲು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಬಳಿಕ ಉತ್ತನಹಳ್ಳಿಯಲ್ಲಿರುವ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ತಮ್ಮ ಸ್ವಗ್ರಾಮ ಗುಂಗ್ರಾಲ್ ಛತ್ರದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ್ದಲ್ಲದೇ ನಂಜನಗೂಡು ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಗಡೂರು ಅಂಕನಾಥೇಶ್ವರ ದೇವಸ್ಥಾನಕ್ಕೂ ಭೇಟಿ ನೀಡುವುದರೊಂದಿಗೆ ಟೆಂಪಲ್ ರನ್ ಮೂಲಕ ಗಮನ ಸೆಳೆದರು.

ಚಾಮುಂಡಿಬೆಟ್ಟದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಬಂದಿದ್ದೇನೆ. ನಾಡದೇವಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದ್ದೇನೆ. ಆಷಾಢ ಮಾಸದ ಮೊದಲ ಶುಕ್ರವಾರದಂದು ನಡೆಯಲಿರುವ ವಿಶೇಷ ಪೂಜಾ ಮಹೋತ್ಸವದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯಲಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನಾಡಿನ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಜು.20ರಂದು ಕಬಿನಿ, ಕೆಆರ್‌ಎಸ್‌ ಅಣೆಕಟ್ಟೆಗೂ ಬಾಗಿನ ಅರ್ಪಿಸಲಿದ್ದಾರೆ. ಈ ಭಾರೀ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಉನ್ನತ ಶಿಕ್ಷಣ ಖಾತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಜಿ.ಟಿ.ದೇವೆಗೌಡರು, ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ. ರಾಜ್ಯದಲ್ಲಿ ಹತ್ತು ಸಾವಿರ ಅತಿಥಿ ಉಪನ್ಯಾಸಕರ ನೇಮಕ ಮಾಡುತ್ತೇನೆ. ಶೀಘ್ರದಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಕುಲಪತಿ ನೇಮಕ ಮಾಡಲಾಗುತ್ತದೆ. ಮುಕ್ತ ವಿವಿಯ ಮಾನ್ಯತೆ ವಿಚಾರ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ಮಾಹಿತಿ ನೀಡಿದರು.

ಶೀಘ್ರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಮೈಸೂರು: ಶೀಘ್ರದಲ್ಲಿಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ಕೊಡಬೇಕು ಎನ್ನುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ. ಈಗಾಗಲೇ ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಿದರೆ ಉತ್ತಮ ಎನ್ನುವುದನ್ನು ಅವಲೋಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವೇ ದಿನದಲ್ಲಿ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಲಿದೆ ಎಂದರು.