ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅನುತ್ತೀರ್ಣಗೊಂಡ ವಿದ್ಯಾರ್ಥಿ ನೇಣಿಗೆ ಶರಣು
ಚಾಮರಾಜನಗರ

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅನುತ್ತೀರ್ಣಗೊಂಡ ವಿದ್ಯಾರ್ಥಿ ನೇಣಿಗೆ ಶರಣು

July 21, 2018

ಚಾಮರಾಜನಗರ, ಜು.20- ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿ ಸಿದ್ದಪ್ಪ ಎಂಬುವವರ ಮಗ ಅಕ್ಷಯ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ನಗರದ ಜೆಎಸ್‍ಎಸ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ್ ಕಳೆದ ಮಾರ್ಚ್‍ನಲ್ಲಿ ನಡೆದಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದನು. ನಂತರ ಇತ್ತೀಚೆಗೆ ನಡೆದ ಪೂರಕ ಪರೀಕ್ಷೆ ಬರೆದಿದ್ದ. ಗುರುವಾರ ಸಂಜೆ ಪೂರಕ ಫಲಿತಾಂಶ ಪ್ರಕಟಗೊಂಡಿತ್ತು. ಅದನ್ನು ನೋಡಿದ ಅಕ್ಷಯ್, ಆ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದನು. ಇದರಿಂದ ಮನನೊಂದ ಇಂದು ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿಯ ಸೀರೆಯಿಂದ ಮನೆಯ ತೊಲೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಟ್ಟಣ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಸಾಗರ್ ‘ಮೈಸೂರು ಮಿತ್ರ’ನಿಗೆ ತಿಳಿಸಿದರು.

ಅಕ್ಷಯ್ ತಾಯಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು.

Translate »