ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ
ಮೈಸೂರು

ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ

August 27, 2018

ಮಂಗಳೂರು: ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ವೈಫಲ್ಯತೆಗಳನ್ನು ವಿವರಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ಜನರನ್ನು ಕಾಂಗ್ರೆಸ್ ಪಕ್ಷ ಎದುರು ನೋಡುತ್ತಿರುವುದಾಗಿ ತಿಳಿಸಿದರು.

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ದೇಶವನ್ನು ಅಪಾಯದ ಸ್ಥಿತಿಗೆ ತಳ್ಳುತ್ತಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಉದ್ಯೋಗ ಇಲ್ಲದೆ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಮುಕ್ತ ರಾಷ್ಟ್ರವನ್ನಾಗಿ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ, ವಿದೇಶಿ ಬ್ಯಾಂಕುಗಳಿಂದ ಕಪ್ಪು ಹಣವನ್ನು ವಾಪಾಸ್ ತರುವಲ್ಲಿ ವಿಫಲರಾಗಿದ್ದಾರೆ. ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ನೀಡಿದ ಮಾತನ್ನು ಉಳಿಸಿಕೊಂಡಿಲ್ಲ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

Translate »