ಡಿ.14, 15ರಂದು ಮೈಸೂರಿನಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಸಮ್ಮೇಳನ
ಮೈಸೂರು

ಡಿ.14, 15ರಂದು ಮೈಸೂರಿನಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಸಮ್ಮೇಳನ

December 3, 2019

ಮೈಸೂರು, ಡಿ.2(ಪಿಎಂ)- ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಮೈಸೂರಿನಲ್ಲಿ ಡಿ.14 ಹಾಗೂ 15ರಂದು 8ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹಿರಿಯ ವಕೀಲ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಸಿ.ಎಂ.ಜಗದೀಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆಯುತ್ತಿರುವ ಪ್ರಥಮ ಸಮ್ಮೇಳನ ಇದಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಡಿ.14ರಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನೆಯನ್ನು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳ ಮತ್ತು ತ್ರಿಪುರ ಮಾಜಿ ಅಡ್ವೊಕೇಟ್ ಜನರಲ್ ಬಿಕಾಸ್ ಭಟ್ಟಾಚಾರ್ಯ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಭಾಗವಹಿಸಲಿದ್ದಾರೆ. ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಹಿರಿಯ ವಕೀಲ ಎಸ್.ಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಕೃಷ್ಣಪ್ಪ ಭೀಮಪ್ಪ ನಾಯಕ್, ಉಪಾಧ್ಯಕ್ಷ ಬಿ.ಎ.ಶ್ರೀನಿವಾಸ್, ಒಕ್ಕೂಟದ ದಕ್ಷಿಣ ಭಾರತ ಸಂಚಾಲಕ ಕೊಲ್ಲಿ ಸತ್ಯನಾರಾಯಣ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಂವಿಧಾನಿಕ ಮೌಲ್ಯಗಳ ರಕ್ಷಣೆ ಕುರಿತಂತೆ ವಿಚಾರ ಸಂಕಿರಣ, ವಸ್ತು ಪ್ರದರ್ಶನ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ನಡೆಯಲಿವೆ. ಸಂವಿಧಾನಿಕ ತತ್ವ ಎತ್ತಿ ಹಿಡಿಯುವ ಸಲುವಾಗಿ 1982ರಲ್ಲಿ ಒಕ್ಕೂಟ ಸ್ಥಾಪನೆಯಾಯಿತು. ಸಮ್ಮೇಳನದ ನಂತರ ಮೈಸೂರು ಘಟಕದ ಆರಂಭಿಸುವ ಪ್ರಕ್ರಿಯೆ ನಡೆಸಲಾಗುವುದು ಎಂದು ವಿವರಿಸಿದರು.
ಇದೇ ವೇಳೆ ಸಮ್ಮೇಳನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಸಮ್ಮೇಳನ ಸ್ವಾಗತ ಸಮಿತಿ ಉಪಾಧ್ಯಕ್ಷ ಎಸ್.ಉಮೇಶ್, ಸಂಚಾಲಕ ಪಿ.ಪಿ.ಬಾಬುರಾಜ್, ಸಹ ಸಂಚಾಲಕ ಮುರಳೀಧರ್ ಪೇಶ್ವಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »