ನಾಳೆ ಮಂಡ್ಯದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ
ಮಂಡ್ಯ

ನಾಳೆ ಮಂಡ್ಯದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

August 24, 2021

ಮಂಡ್ಯ, ಆ.23(ಮೋಹನ್‍ರಾಜ್)- ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ ಆ.25ರಂದು ಮಂಡ್ಯ ನಗರದಲ್ಲಿ ಜರುಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ದೆಹಲಿ ಉಸ್ತುವಾರಿ ಹಾಗೂ ಸಂಸದ ದುಶ್ಯಂತ್ ಕುಮಾರ್ ಗೌತಮ್ ಸೇರಿದಂತೆ 80 ಮಂದಿ ಪ್ರಮುಖ ಪದಾಧಿಕಾರಿಗಳು ಭಾಗ ವಹಿಸಲಿದ್ದು, ಸಭೆ ನಗರದ ಸುಮಾ- ರವಿ ಹಾಲ್‍ನಲ್ಲಿ ಜರುಗಲಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೀ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸಭೆ ನಡೆಯುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಹೆಚ್ಚಿಗೆ ಜನ ಸೇರಿಸಬಾರದೆಂಬ ಕಾರಣಕ್ಕೆ ರಾಜ್ಯದ ಪ್ರಮುಖ ಪದಾಧಿಕಾರಿಗಳನ್ನು ಮಾತ್ರ ಸಭೆಗೆ ಆಹ್ವಾನಿಸಿದ್ದು, ಬೆಳಗ್ಗೆ 10.30ಕ್ಕೆ ಆರಂಭವಾಗುವ ಸಭೆ ಸಂಜೆಯವರೆಗೂ ನಡೆಯಲಿದೆ ಎಂದು ಹೇಳಿದರು. ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಗೆ ಮಂಡ್ಯ ಜಿಲ್ಲಾ ಬಿಜೆಪಿ ಘಟಕ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹಳೇ ಮೈಸೂರು ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬಲವರ್ಧನೆ, ಹಿಂದೆ ಚಿತ್ರದುರ್ಗದಲ್ಲಿ ನಡೆದಿದ್ದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿದೆಯಾ ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ, ಮಾಜಿ ಸಚಿವ ಎ.ಮಂಜು, ಬಿಜೆಪಿ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮುಖಂಡರಾದ ಸಿದ್ದರಾಮಯ್ಯ, ಕಾಳೇಗೌಡ, ನಾಗಾನಂದ ಇದ್ದರು.

 

Translate »