ರಾಜ್ಯದ ಮಾನಸ  ಸರೋವರ ಯಾತ್ರಾರ್ಥಿಗಳು ಸುರಕ್ಷಿತ
ಮೈಸೂರು

ರಾಜ್ಯದ ಮಾನಸ ಸರೋವರ ಯಾತ್ರಾರ್ಥಿಗಳು ಸುರಕ್ಷಿತ

July 4, 2018

ಬೆಂಗಳೂರು: ಮಾನಸ ಸರೋವರ ಯಾತ್ರೆಗೆ ತೆರ ಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತ ವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು.

ಶೂನ್ಯವೇಳೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಭಾರೀ ಮಳೆ ಯಿಂದಾಗಿ ಯಾತ್ರಾರ್ಥಿಗಳಿಗೆ ತೊಂದರೆ ಯಾಗಿರುವುದು ನಿಜ. ಯಾತ್ರೆಗೆ ತೆರಳಿದ್ದ 525 ಯಾತ್ರಾರ್ಥಿಗಳ ಪೈಕಿ ರಾಜ್ಯದ 250 ಯಾತ್ರಾರ್ಥಿಗಳಿದ್ದು, ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳ ರಕ್ಷಣೆಗೆ ಧಾವಿಸುವಂತೆ ಕೇಂದ್ರದ ಗೃಹ ಇಲಾಖೆ, ವಿದೇಶಾಂಗ ವ್ಯವಹಾರಗಳ ಇಲಾಖೆಗೂ ಮನವಿ ಮಾಡಿದ್ದೇವೆ. ಸಂಕಷ್ಟಕ್ಕೆ ಒಳಗಾದವರಿಗೆ ಊಟ, ತಿಂಡಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾರೀ ಮಳೆ ಯಿಂದಾಗಿ ಹೆಲಿಕಾಪ್ಟರ್ ಬಳಸಲು ಸಾಧ್ಯ ವಾಗುತ್ತಿಲ್ಲ. ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕೂಡ ಈ ಯಾತ್ರಾರ್ಥಿಗಳ ನೆರವಿಗೆ ಧಾವಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ನೇಪಾಳದ ಸೇನಾ ಹೆಲಿಕಾಪ್ಟರ್ ಮೂಲಕ ಅನಾರೋಗ್ಯಕ್ಕೊಳಗಾದವರು, ವಯಸ್ಸಾದವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುವಂತೆ ಅಲ್ಲಿರುವ ನಮ್ಮ ರಾಯಭಾರಿಗೆ ಕೋರಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸೂಚನೆ ನೀಡಿ ಯಾತ್ರಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಿದರು. ಕಂದಾಯ ಇಲಾಖೆ ಪ್ರಕೃತಿ ವಿಕೋಪ ಕಾರ್ಯದರ್ಶಿಗೂ ಯಾತ್ರಾರ್ಥಿಗಳ ರಕ್ಷಣೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಕಾಗೇರಿ ಅವರು, ಅಮರನಾಥ ಯಾತ್ರೆ, ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳು ಅತಿಯಾದ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದು, ಇದೊಂದು ಗಂಭೀರವಾದ ವಿಚಾರವಾಗಿದೆ. ಯಾತ್ರಾರ್ಥಿಗಳಿಗೆ ಊಟವಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಅವರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಮಾಹಿತಿ ಒದಗಿಸುವಂತೆ ಆಗ್ರಹಿಸಿದರು.

Translate »