ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದ ಮೈಸೂರು  ವಿವಿ ಆಡಳಿತ ವರ್ಗದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು: ದ್ವಿತೀಯ ವರ್ಷದ ವ್ಯಾಸಂಗಕ್ಕೆ ಪ್ರವೇಶ ನೀಡಿ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದೇ ಮೈಸೂರು ವಿವಿಯ ಆಡಳಿತ ವರ್ಗ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಮೈಸೂರು ವಿವಿ ಸಂಶೋಧಕರ ಸಂಘದ ಆಶ್ರಯದಲ್ಲಿ ವಿವಿಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಮೈಸೂರಿನ ಮಾನಸ ಗಂಗೋತ್ರಿಯ ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿಲಯಕ್ಕೆ ಪ್ರವೇಶ ನೀಡದೇ ದೂರದ ಊರುಗಳಿಂದ ವ್ಯಾಸಂಗಕ್ಕೆ ಬಂದಿರುವ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಳ್ಳಲು ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂಬಂಧ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಡೀನ್ ಪ್ರವೀಣ್ ಅವರನ್ನು ಪ್ರಶ್ನಿಸಿದರೆ, ಆಡಳಿತಾಂಗ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರು ಆದೇಶಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರಿಸುತ್ತಾರೆ. ಕುಲಸಚಿವ ಪ್ರೊ.ಆರ್.ರಾಜಣ್ಣ ವಿದ್ಯಾರ್ಥಿಗಳ ಸಂಘಟನೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ಜೊತೆಗೆ ಚಾಪೆ, ದಿಂಬಿನೊಂದಿಗೆ ಹಾಸಿಕೊಂಡು ಪ್ರತಿಭಟನಾ ಸ್ಥಳದಲ್ಲಿ ಮಲಗುವ ಮೂಲಕ ವಿವಿ ಆಡಳಿತ ವರ್ಗದ ಕ್ರಮವನ್ನು ಅಣುಕಿಸಲಾಯಿತು. ಇಂದು ಬೆಳಿಗ್ಗೆ ದಿಢೀರ್ ಪ್ರತಿಭಟನೆ ಆರಂಭಿಸಿದ ವಿದ್ಯಾರ್ಥಿಗಳು, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಡೀನ್ ಪ್ರವೀಣ್ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ನೀಡಲು ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆಗೆ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಗೌರವಾಧ್ಯಕ್ಷ ಗೋಪಾಲ್, ಪ್ರಧಾನ ಕಾರ್ಯದರ್ಶಿ ಮಹೇಶ್ ಸೋಸ್ಲೆ ಸೇರಿದಂತೆ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.