ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೂ ಬೆಂಬಲಿಸುತ್ತೇವೆ
ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೂ ಬೆಂಬಲಿಸುತ್ತೇವೆ

March 11, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಯಾರೆಂದು ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳ ಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಘೋಷಿಸಿದರು.

ನಗರದ ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ಕೃಷ್ಣರಾಜಪೇಟೆ ತಾಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯನ್ನು ಜೆಡಿಎಸ್ -ಕಾಂಗ್ರೆಸ್ ಒಟ್ಟಾಗಿ ಎದುರಿಸಲಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾವುದೇ ಗೊಂದಲವಿಲ್ಲ. ಜೆಡಿಎಸ್ ಅಭ್ಯರ್ಥಿ ಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಅವರು ಮೈಸೂರಿನಿಂದಲೇ ಸ್ಪರ್ಧಿಸ ಬೇಕು ಎಂದು ಮನವಿ ಮಾಡಿದ್ದೇವೆ. ಇಬ್ಬ ರಲ್ಲಿ ಯಾರೇ ಸ್ಪರ್ಧಿಸಿದರೂ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದರು.

ಇಂದು ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಜೊತೆಯಾಗಿಯೇ ಚುನಾವಣೆಯನ್ನು ಎದುರಿಸಲಿದೆ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಸಾಲಮನ್ನಾ ಸೇರಿದಂತೆ ಹಲ ವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟ ರಾಜು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಎದುರಿಸಲಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾಗಿ ನಿಖಿಲ್ ಕುಮಾರಸ್ವಾಮಿ ಯವ ರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮಂಡ್ಯದಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತಿದ್ದ ಕಾಂಗ್ರೆಸ್ ನಮ್ಮೊಂದಿಗೆ ಮೈತ್ರಿ ಯಾಗಿರುವುದರಿಂದ ನಿಖಿಲ್ ಕುಮಾರ ಸ್ವಾಮಿ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯಗಳಿಸುತ್ತಾರೆ ಎಂದರು.

Translate »