ನವದೆಹಲಿ, ಜು. 1- ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮೇಲ್ವರ್ಗದವರಿಗೆ ಮೀಸಲಾತಿಗೆ ತಡೆ ಕೋರಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‍ಎ ಬೊಬ್ಡೆ ಹಾಗೂ ಬಿಆರ್ ಗವಾಯಿ ಅವರು, ಈ ಕುರಿತು ಸುದೀರ್ಘ ವಿಚಾರಣೆಯ ಅಗತ್ಯ ಇದೆ ಎಂದು ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿದ್ದಾರೆ. ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ ಸ್ಪಷ್ಟವಾಗಿ ಹೇಳಿದೆ. ಕೇಂದ್ರ ಸರ್ಕಾರ ಈ ನಿರ್ಧಾರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದಾರೆ.
